ಕಲಬುರಗಿ: ಸ್ತ್ರೀಶಕ್ತಿ ಸಂಘಗಳಲ್ಲಿ ಕ್ರೆಡಿಟ್ ಸೊಸೈಟಿ ಆರಂಭಿಸಲು ಚಿಂತನೆ ನಡೆಸಲಾಗಿದೆ ಎಂದು ಸಚಿವ ಡಾ. ಶರಣ್ ಪ್ರಕಾಶ್ ಪಾಟೀಲ್ ತಿಳಿಸಿದ್ದಾರೆ.
ಮೈಕ್ರೋ ಫೈನಾನ್ಸ್ ಗಳ ಹಾವಳಿಯಿಂದ ಮಹಿಳೆಯರನ್ನು ರಕ್ಷಿಸಲು ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಆರಂಭಕ್ಕೆ ಚಿಂತನೆ ನಡೆದಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
ರಾಜ್ಯದ ಅನೇಕ ಕಡೆ ಮೈಕ್ರೋಫೈನಾನ್ಸ್ ಗಳ ಕಿರುಕುಳ ಹೆಚ್ಚಾಗಿದೆ. ಇದನ್ನು ತಡೆಯುವ ಉದ್ದೇಶದಿಂದ ಸ್ವಸಹಾಯ ಸಂಘಗಳಿಗೆ ಕಡಿಮೆ ಬಡ್ಡಿ ದರದಲ್ಲಿ ಹೆಚ್ಚಿನ ಹಣ ಸಾಲದ ರೂಪದಲ್ಲಿ ನೀಡಲು ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಆರಂಭಿಸುವ ಚರ್ಚೆ ನಡೆದಿದೆ ಎಂದು ಹೇಳಿದ್ದಾರೆ.
ರಾಜ್ಯದಾದ್ಯಂತ 2.80 ಲಕ್ಷ ಮಹಿಳಾ ಸ್ವಸಹಾಯ ಗುಂಪುಗಳಿದ್ದು, ಇವುಗಳಿಗೆ, ಸ್ವಸಹಾಯ ಸಂಘಗಳಿಗೆ ಇನ್ನಷ್ಟು ಅನುಕೂಲ ಕಲ್ಪಿಸಲು ತಲಾ 15 ಲಕ್ಷ ರೂಪಾಯಿ ವೆಚ್ಚದಲ್ಲಿ 50 ಕಡೆ ಅಕ್ಕ ಕೆಫೆ ಮತ್ತು ತಲಾ 1 ಲಕ್ಷ ರೂಪಾಯಿ ವೆಚ್ಚದಲ್ಲಿ 2500 ಕಡೆ ಕಾಫಿ ಕಿಯೋಸ್ಕ್ ಸ್ಥಾಪಿಸಲು ಮೂಲಸೌಕರ್ಯ ಕಲ್ಪಿಸಲಾಗುತ್ತಿದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.