
ಬೆಳಗಾವಿ: ಕೆ.ಎಸ್.ಆರ್.ಟಿ.ಸಿ ಬಸ್ ಕಂಡಕ್ಟರ್ ಮೇಲೆ ಎಂಇಎಸ್ ಪುಂಡರು ಹಲ್ಲೆ ನಡೆಸಿರುವುದನ್ನು ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಬೆಳಗಾವಿಯಲ್ಲಿ ಪ್ರತಿಭಟನೆ ಪ್ರಾರಂಭಿಸಿದ್ದಾರೆ.
‘ಮರಾಠಿ ಬರಲ್ಲ, ಕನ್ನಡ ಮಾತನಾಡಿ’ ಎಂದಿದ್ದಕ್ಕೆ ಬಸ್ ಕಂಡಕ್ಟರ್ ಮೇಲೆ ಮರಾಠಿ ಪುಂಡರು ಹಿಗ್ಗಾಮುಗ್ಗ ಹಲ್ಲೆ ನಡೆಸಿದ್ದರು. ಗಂಭೀರವಾಗಿ ಹಲ್ಲೆಗೊಳಗಾದ ಕಂಡಕ್ಟರ್ ಮಹದೇವ್ ಬೆಳಗಾವಿ ಬಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಘಟನೆ ಬೆನ್ನಲ್ಲೇ ಕರ್ನಾಟಕ ಹಾಗೂ ಮಹಾರಾಷ್ಟ್ರ ಗಡಿಯಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಎರಡೂ ರಾಜ್ಯಗಳ ನಡುವೆ ಸಾರಿಗೆ ಬಸ್ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ.
ಒಂದೆಡೆ ಮಹಾರಾಷ್ಟ್ರ, ಕೊಲ್ಲಾಪುರದಲ್ಲಿ ಕರ್ನಾಟಕದ ಬಸ್ ಗಳನ್ನು ತಡೆದು ಎಂಇಎಸ್ ಹಾಗೂ ಶಿವಸೇನೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದರೆ ಮತ್ತೊಂದೆಡೆ ಕರ್ನಾಟಕದ ಗಡಿ ಜಿಲ್ಲೆ ಬೆಳಗಾವಿಯಲ್ಲಿ ಕನ್ನಡಪರ ಸಂಘಟನೆಗಳು ಸಿಡಿದೆದ್ದಿವೆ.
ಇಂದು ಕರವೇ ನಾರಾಯಣ ಗೌಡ ಬಣ ಹಾಗೂ ಕರವೇ ಪ್ರವೀಣ್ ಶೆಟ್ಟಿ ಬಣಗಳ ನೇತೃತ್ವದಲ್ಲಿ ಬೆಳಗಾವಿಯಲ್ಲಿ ಪ್ರತಿಭಟನೆ ನಡೆಡಿದ್ದು, ಚನ್ನಮ್ಮ ವೃತ್ತಕ್ಕೆ ಆಗಮಿಸಿರುವ ಪ್ರವೀಣ್ ಶೆಟ್ಟಿ ಬಣದ ಕಾರ್ಯಕರ್ತರು ಎಂಇಎಸ್ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇನ್ನೊಂದೆಡೆ ಕರವೇ ನಾರಾಣಗೌಡ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿರುವ ಕರನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು, ಎಂಇಎಸ್, ಮರಾಠಿ ಪುಂದರು ಕರ್ನಾಟಕಾಟಕ ನೆಲದಲ್ಲಿ ಕನ್ನಡಿಗರ ಮೇಲೆ ಗೂಂಡಾಗಿರಿ ನಡೆಸಿ, ಹಲ್ಲೆ ನಡೆಸುತ್ತಿರುವುದರ ವಿರುದ್ಧ ಕಿಡಿಕಾರಿದ್ದಾರೆ. ಬೆಳಗಾವಿಯಲ್ಲಿ ಕನ್ನಡ ಪರ ಸಂಘಟನೆಗಳ ಪ್ರತಿಭಟನೆ ತೀವ್ರಗೊಂಡಿದೆ.