
ಚಾಮರಾಜನಗರ: ಎಸ್.ಎಸ್.ಎಲ್.ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷಾರ್ಥ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್. ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಕೆ.ಎಸ್.ಆರ್.ಟಿ.ಸಿ ಬಸ್ ನಲ್ಲಿ ಉಚಿತ ಪ್ರಯಾಣಕ್ಕೆ ವ್ಯವಸ್ಥೆ ಮಾಡಲಾಗುವುದು ಎಂದು ಚಾಮರಾಜನಗರ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ತಿಳಿಸಿದ್ದಾರೆ.
ಮಾರ್ಚ್ 1ರಿಂದ ದ್ವಿತೀಯ ಪಿಯುಸಿ ಹಾಗೂ ಮಾರ್ಚ್ 21ರಿಂದ ಎಸ್.ಎಸ್.ಎಲ್.ಸಿ ಪರೀಕ್ಷೆ ನಡೆಯಲಿದೆ. ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಕೆ.ಎಸ್.ಆರ್.ಟಿ.ಸಿ ಬಸ್ ಗಳಲ್ಲಿ ಉಚಿತ ಪ್ರಯಾಣವಿರಲಿದೆ ಎಂದು ತಿಳಿಸಿದ್ದಾರೆ.
ಚಾಮರಾಜನಗರದಲ್ಲಿ ಪಿಯುಸಿ ಗೆ 17 ಪರೀಕ್ಷಾ ಕೇಂದ್ರ ಹಾಗೂ ಎಸ್.ಎಸ್.ಎಲ್.ಸಿಗೆ 47 ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗುವುದು. ಪರೀಕ್ಷಾ ಕೇಂದ್ರಗಳಿರುವ ಸ್ಥಳಗಳಿಗೆ ಕೆ.ಎಸ್.ಆರ್.ಟಿ.ಸಿಯಿಂದ ಹೆಚ್ಚುವರಿ ಬಸ್ ಸಂಚಾರಕ್ಕೆ ಕ್ರಮ ಕೈಗೊಳ್ಳಲಾಗುವುದು. ಪರೀಕ್ಷಾ ಕೇಂದ್ರದ ಪ್ರತಿ ಕೊಠಡಿಗೆ ಸಿಸಿ ಕ್ಯಾಮರಾ ಅಳವಡಿಸಲಾಗುವುದು ಎಂದರು.