
ಬೆಂಗಳೂರು: ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸಲು ಸರ್ಕಾರಕ್ಕೆ ಗಡುವು ನೀಡಿರುವ ಖಾಸಗಿ ಸಾರಿಗೆ ಒಕ್ಕೂಟ ಬೇಡಿಕೆ ಈಡೇರಿಸದಿದ್ದರೆ ಮುಷ್ಕರಕ್ಕೆ ಸಿದ್ಧತೆ ಕೈಗೊಂಡಿದೆ.
2023ರ ಸೆಪ್ಟಂಬರ್ 12ರಂದು ಖಾಸಗಿ ಸಾರಿಗೆ ಸಂಘಟನೆಗಳ ಒಕ್ಕೂಟದಿಂದ ಬೆಂಗಳೂರಿನಲ್ಲಿ ಖಾಸಗಿ ವಾಹನಗಳ ಸಾರಿಗೆ ಮುಷ್ಕರ ಕೈಗೊಳ್ಳಲಾಗಿತ್ತು. ಈ ವೇಳೆ ಸರ್ಕಾರದ ಮುಂದೆ ವಿವಿಧ ಬೇಡಿಕೆ ಇಟ್ಟಿದ್ದು, ಇದುವರೆಗೆ ಪ್ರಮುಖ ಬೇಡಿಕೆಗಳನ್ನು ಸರ್ಕಾರ ಈಡೇರಿಸಿಲ್ಲ. ಹೀಗಾಗಿ ಮತ್ತೊಮ್ಮೆ ಖಾಸಗಿ ಸಾರಿಗೆ ಮುಷ್ಕರಕ್ಕೆ ಸಿದ್ಧತೆ ಮಾಡಿಕೊಳ್ಳಲಾಗಿದೆ.
ಮಾರ್ಚ್ 22ರೊಳಗೆ ಪ್ರಮುಖ ಬೇಡಿಕೆಗಳನ್ನು ಮುಖ್ಯಮಂತ್ರಿಗಳು ಈಡೇರಿಸಬೇಕು. ಇಲ್ಲದಿದ್ದಲ್ಲಿ ಮಾರ್ಚ್ 24ಕ್ಕೆ ಖಾಸಗಿ ಸಾರಿಗೆ ಸಂಘಟನೆಗಳ ಒಕ್ಕೂಟದ ಸಭೆ ಕರೆದು ಮುಷ್ಕರಕ್ಕೆ ಕರೆ ನೀಡಲಾಗುವುದು ಎಂದು ಖಾಸಗಿ ಸಾರಿಗೆ ಸಂಘಟನೆಗಳು ಒಕ್ಕೂಟದ ಅಧ್ಯಕ್ಷ ನಟರಾಜ್ ಶರ್ಮಾ ಹೇಳಿದ್ದಾರೆ/
ಖಾಸಗಿ ಬಸ್, ಆಟೋ, ಟ್ಯಾಕ್ಸಿ, ಸ್ಕೂಲ್ ಬಸ್, ಗೂಡ್ಸ್ ವಾಹನಗಳು ಸೇರಿ ಎಲ್ಲ ರೀತಿಯ ಖಾಸಗಿ ಸಾರಿಗೆ ವ್ಯವಸ್ಥೆ ಸ್ಥಗಿತ ಮಾಡಲು ಮುಂದಾಗಿದ್ದು, 65 ಸಂಘಟನೆಗಳು ಬೆಂಬಲ ನೀಡಿವೆ ಎಂದು ತಿಳಿಸಿದ್ದಾರೆ.