
ಬೆಂಗಳೂರು: ಬಿಸಿಲಿನ ತಾಪಮಾನ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಬೇಸಿಗೆ ಮುಗಿಯುವವರೆಗೆ ನೆರೆಯ ರಾಜ್ಯಗಳ ರೀತಿ ಕರ್ನಾಟಕದಲ್ಲಿಯೂ ಜಿಲ್ಲಾ ಮತ್ತು ವಿಚಾರಣಾ ನ್ಯಾಯಾಲಯದಲ್ಲಿನ ವಕೀಲರಿಗೆ ಕಪ್ಪು ಕೋಟು ಧರಿಸುವುದರಿಂದ ವಿನಾಯಿತಿ ನೀಡಬೇಕೆಂದು ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್.ವಿ. ಅಂಜಾರಿಯಾ ಅವರಿಗೆ ಬೆಂಗಳೂರು ವಕೀಲರ ಸಂಘ ಪತ್ರ ಬರೆದು ಮನವಿ ಮಾಡಿದೆ.
ವಿಚಾರಣಾಧೀನ ನ್ಯಾಯಾಲಯಗಳಲ್ಲಿ ಹವಾನಿಯಂತ್ರಿತ ವ್ಯವಸ್ಥೆ ಇಲ್ಲದಿರುವುದರಿಂದ ಬಿಳಿಯ ಬಟ್ಟೆ ಮೇಲೆ ಕಪ್ಪು ಕೋಟು ಮತ್ತು ಬ್ಯಾಂಡ್ ಹಾಕುವುದು ಕಷ್ಟವಾಗಿದೆ. ಈ ಹಿನ್ನೆಲೆಯಲ್ಲಿ ಬೇಸಿಗೆ ಕಾಲ ಮುಗಿಯುವವರೆಗೆ ಕಪ್ಪು ಕೋಟ್ ಧರಿಸುವುದರಿಂದ ವಿನಾಯಿತಿ ನೀಡಬೇಕೆಂದು ಕೋರಲಾಗಿದೆ.
ಮಹಾರಾಷ್ಟ್ರ ಮತ್ತು ಗೋವಗಳಲ್ಲಿ ಕಪ್ಪು ಕೋಟು ಹಾಕುವುದರಿಂದ ವಕೀಲರಿಗೆ ವಿನಾಯಿತಿ ನೀಡಲಾಗಿದೆ. ಇದೇ ರೀತಿ ರಾಜ್ಯದಲ್ಲಿಯೂ ವಾತಾವರಣ ಇದ್ದು, ಇದನ್ನು ಪರಿಗಣಿಸಿ ಕ್ರಮ ಕೈಗೊಳ್ಳಬೇಕೆಂದು ವಕೀಲರ ಸಂಘದ ಪದಾಧಿಕಾರಿಗಳು ಮನವಿ ಮಾಡಿದ್ದಾರೆ.