
ಕಲಬುರಗಿ: ಕಲಬುರಗಿ ಜಿಲ್ಲೆ ಜೇವರ್ಗಿ ತಾಲೂಕಿನ ರೇವನೂರ ಗ್ರಾಮದ ಬಳಿ ಕುರಿ ಮೇಯಿಸುತ್ತಿದ್ದ ಕುರಿಗಾಹಿ ಮೇಲೆ ಚಿರತೆ ದಾಳಿ ಮಾಡಿದೆ.
ಚಿರತೆ ದಾಳಿಯಿಂದ ಕುರಿಗಾಹಿ ನಿಂಗಪ್ಪ ಪೂಜಾರಿ ಸ್ಥಿತಿ ಗಂಭೀರವಾಗಿದೆ. ಗಾಯಾಳು ನಿಂಗಪ್ಪ ಅವರನ್ನು ತಾಲೂಕು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ವಿಷಯ ತಿಳಿದು ಸ್ಥಳಕ್ಕೆ ಬಂದ ಅರಣ್ಯ ಇಲಾಖೆ ಸಿಬ್ಬಂದಿಯನ್ನು ಸ್ಥಳೀಯರು ತರಾಟೆಗೆ ತೆಗೆದುಕೊಂಡಿದ್ದಾರೆ.
ಕೂಡಲೇ ಚಿರತೆ ಸೆರೆ ಹಿಡಿದು ಸ್ಥಳಾಂತರ ಮಾಡುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ. ಕಲಬುರ್ಗಿ ಜಿಲ್ಲೆ ಜೇವರ್ಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.