
ಬೆಂಗಳೂರು: ರಾಜ್ಯದಲ್ಲಿ ಸೈಬರ್ ಅಪರಾಧಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಇದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ಹೇಳಿದ್ದಾರೆ.
ಗುರುವಾರ ವಿಧಾನ ಪರಿಷತ್ ನಲ್ಲಿ ಬಿಜೆಪಿ ಸದಸ್ಯ ನವೀನ್ ಕುಮಾರ್ ಅವರ ಪ್ರಶ್ನೆಗೆ ಉತ್ತರ ನೀಡಿದ ಸಚಿವರು, ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹಬ್ಬಿಸುವವರ ವಿರುದ್ಧ ಕಟ್ಟುನಿಟ್ಟಿನ ಕಾನೂನು ಕ್ರಮ ತೆಗೆದುಕೊಳ್ಳುತ್ತಿದ್ದೇವೆ. ಇದಕ್ಕಾಗಿ ಪ್ರತಿ ಠಾಣೆಯಲ್ಲಿ ವಿಶೇಷ ನಿಗಾ ಘಟಕ ಸ್ಥಾಪಿಸಲಾಗುವುದು ಎಂದು ಹೇಳಿದ್ದಾರೆ.
ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹಾಕುವವರ ವಿರುದ್ಧ ಸುಮೋಟೊ ಕೇಸ್ ದಾಖಲಿಸಿಕೊಳ್ಳಲಾಗುವುದು. 2023ರಲ್ಲಿ 228, 2024ರಲ್ಲಿ 338, 2025ರಲ್ಲಿ ಇದುವರೆಗೆ 68 ಸುಮೋಟೊ ಪ್ರಕರಣ ದಾಖಲಾಗಿವೆ ಎಂದು ಸಚಿವರು ತಿಳಿಸಿದ್ದಾರೆ.