ಬಳ್ಳಾರಿ : ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ವರದಿಯನ್ವಯ ಬಳ್ಳಾರಿ ಜಿಲ್ಲೆಯಲ್ಲಿ ಮುಂದಿನ ದಿನಗಳಲ್ಲಿ ಬಿಸಿ ಗಾಳಿಯ ಪರಿಸ್ಥಿತಿ ಉಂಟಾಗುವ ಸಾಧ್ಯತೆಯಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ನಾಗರಿಕರು ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರೂ ಆದ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ತಿಳಿಸಿದ್ದಾರೆ.
ಸೂರ್ಯನ ಶಾಖ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಮುಂಜಾಗ್ರತಾ ಕ್ರಮ ವಹಿಸಬೇಕು.
*ಏನು ಮಾಡಬೇಕು
ಸಾರ್ವಜನಿಕರು ರೇಡಿಯೋ, ಟಿವಿ, ದಿನ ಪತ್ರಿಕೆಗಳಲ್ಲಿ ಬರುವ ಅತಿಯಾದ ಬಿಸಿಲಿನ ಕುರಿತು ಮುನ್ಸೂಚನೆಗಳನ್ನು ಪಡೆದುಕೊಳ್ಳುವುದು. ಬಾಯಾರಿಕೆಯಿಲ್ಲದಿದ್ದರೂ ಸಾಕಷ್ಟು ಮತ್ತು ಸಾಧ್ಯವಾದಷ್ಟು ಹೆಚ್ಚಾಗಿ ನೀರನ್ನು ಕುಡಿಯಬೇಕು. ಹಗುರವಾದ, ತಿಳಿ-ಬಣ್ಣದ, ಸಡಿಲವಾದ ಮತ್ತು ರಂಧ್ರವುಳ್ಳ ಹತ್ತಿ ಬಟ್ಟೆಗಳನ್ನು ಧರಿಸಬೇಕು. ಬಿಸಿಲಿನಲ್ಲಿ ಹೋಗುವಾದ ರಕ್ಷಣಾತ್ಮಕ ಕನ್ನಡಕಗಳು, ಛತ್ರಿ/ಟೋಪಿ, ಬೂಟುಗಳು ಅಥವಾ ಚಪ್ಪಲಿಗಳನ್ನು ಬಳಸಬೇಕು.
ಹೊರಗೆ ಹೋಗಿ ಕೆಲಸ ಮಾಡುವವರು ಟೋಪಿ ಅಥವಾ ಛತ್ರಿಯನ್ನು ಬಳಸಿ ಮತ್ತು ತಲೆ, ಕುತ್ತಿಗೆ, ಮುಖ ಮತ್ತು ಕೈಕಾಲುಗಳ ಮೇಲೆ ಒದ್ದೆಯಾದ ಬಟ್ಟೆಯನ್ನು ಸಹ ಬಳಸಿ. ಮನೆಯಲ್ಲಿ ತಯಾರಿಸಿದ ಪಾನೀಯಗಳಾದ ಲಸ್ಸಿ, ಶರಬತ್, ನಿಂಬೆ ನೀರು, ಮಜ್ಜಿಗೆ ಇತ್ಯಾದಿಗಳನ್ನು ಬಳಸಿ ಅದು ದೇಹವನ್ನು ಪುನಃ ತಂಪಾಗಿಡಲು ಸಹಾಯ ಮಾಡುತ್ತದೆ. ಪ್ರಾಣಿ-ಪಕ್ಷಿಗಳನ್ನು ನೆರಳಿನಲ್ಲಿ ಇರಿಸಿ ಮತ್ತು ಅವುಗಳಿಗೆ ಕುಡಿಯಲು ಸಾಕಷ್ಟು ನೀರು ಒದಗಿಸಿ. ಆದಷ್ಟು ಫ್ಯಾನ್ ಗಳನ್ನು ಬಳಸಿ, ಒದ್ದೆಯಾದ ಬಟ್ಟೆಗಳನ್ನು ಮತ್ತು ಆಗಾಗ್ಗೆ ತಣ್ಣೀರಿನಲ್ಲಿ ಸ್ನಾನ ಮಾಡಿ, ಕೆಲಸವನ್ನು ಆದಷ್ಟು ತಂಪಾದ ಸಮಯದಲ್ಲಿ ಮಾಡುವುದು ಉತ್ತಮ ಹಾಗೂ ಕೆಲಸದ ಸ್ಥಳದ ಬಳಿ ತಂಪಾದ ಕುಡಿಯುವ ನೀರನ್ನು ಇರಿಸಿಕೊಳ್ಳಬೇಕು.
ಕೆಲಸ ನಿರ್ವಹಿಸುವ ಗರ್ಭಿಣಿ ಮಹಿಳೆಯರು ಮತ್ತು ಅನಾರೋಗ್ಯದಲ್ಲಿರುವ ಕಾರ್ಮಿಕರಿಗೆ ಹೆಚ್ಚಿನ ಗಮನ ನೀಡಬೇಕು. ನವಜಾತ ಶಿಶುಗಳು ಹಾಗೂ ಚಿಕ್ಕ ಮಕ್ಕಳು, ಗರ್ಭಿಣಿಯರು, ಹೊರಾಂಗಣದಲ್ಲಿ ಕೆಲಸ ನಿರ್ವಹಿಸುವವರು, ಮಾನಸಿಕ ಸಮಸ್ಯೆಗಳಿಂದ ಬಳಲುತ್ತಿರುವವರು ಹಾಗೂ ಇತರ ಆರೋಗ್ಯ ಸಮಸ್ಯೆಗಳಿರುವವರು, ಅದರಲ್ಲೂ ವಿಶೇಷವಾಗಿ ಹೃದ್ರೋಗ ಹಾಗೂ ರಕ್ತದ ಒತ್ತಡದಿಂದ ಬಳಲುತ್ತಿರುವವರು ಹೆಚ್ಚು ಜಾಗರೂಕತೆ ವಹಿಸಬೇಕು.
*ಏನು ಮಾಡಬಾರದು
ಮಕ್ಕಳು ಅಥವಾ ಸಾಕುಪ್ರಾಣಿಗಳನ್ನು ಬಿಸಿಲಿನಲ್ಲಿ ನಿಲ್ಲಿಸಿದ ವಾಹನಗಳ ಹತ್ತಿರ ಬಿಡಬಾರದು. ವಾಹನಗಳ ಒಳಾಂಗಣದಲ್ಲಿನ ಹೆಚ್ಚಿನ ತಾಪಮಾನವು ಅವರಿಗೆ ಮತ್ತು ಅವುಗಳಿಗೆ ಅಪಾಯಕಾರಿಯಾಗಬಹುದು. ಕಪ್ಪುಬಟ್ಟೆ ಅಥವಾ ಬಿಗಿಯಾದ ಬಟ್ಟೆಗಳನ್ನು ಧರಿಸುವುದನ್ನು ತಪ್ಪಿಸಿ. ಹೊರಗಿನ ತಾಪಮಾನ ಹೆಚ್ಚಾದಾಗ ಶ್ರಮದಾಯಕ ಚಟುವಟಿಕೆಗಳನ್ನು ತಪ್ಪಿಸಿ. ವಿಶೇಷವಾಗಿ ಮಧ್ಯಾಹ್ನ 12 ರಿಂದ 3 ರವರೆಗೆ ಹೊರಗೆ ಕೆಲಸ ಮಾಡುವುದನ್ನು ತಪ್ಪಿಸಿ.
ಬಿಸಿಲಿನ ಸಮಯದಲ್ಲಿ ಅಡುಗೆ ಮಾಡುವುದನ್ನು ತಪ್ಪಿಸಿ. ಅಡುಗೆ ಪ್ರದೇಶವನ್ನು ಸಮರ್ಪಕವಾಗಿ ಗಾಳಿಯಾಡಲು ಬಾಗಿಲು ಮತ್ತು ಕಿಟಕಿಗಳನ್ನು ತೆರೆಯಬೇಕು. ದೇಹವನ್ನು ನಿರ್ಜಲೀಕರಣಗೊಳಿಸುವ ಆಲ್ಕೋಹಾಲ್, ಚಹಾ, ಕಾಫಿ ಮತ್ತು ಹಾನಿಕಾರಕ ತಂಪು ಪಾನೀಯಗಳನ್ನು ಸೇವಿಸಬೇಡಿ. ಹಾನಿಕಾರಕವಾದ ಆಹಾರ ಮತ್ತು ಹಳಸಿದ ಆಹಾರವನ್ನು ಸೇವಿಸಬಾರದು. ಚಪ್ಪಲಿ ಧರಿಸದೆ ಹೊರಹೋಗುವ ಅಭ್ಯಾಸವನ್ನು ತಪ್ಪಿಸಬೇಕು.
ಸಾರ್ವಜನಿಕರಿಗೆ ಯಾವುದೇ ತೊಂದರೆಗಳು ಕಂಡುಬAದಲ್ಲಿ ತುರ್ತು ಸಹಾಯಕ್ಕಾಗಿ ಜಿಲ್ಲಾ ವಿಪತ್ತು ನಿರ್ವಹಣಾ ಕೇಂದ್ರದ ದೂ.08392-277100 ಮತ್ತು ಮೊ.8277888866 ಗೆ ಕರೆಮಾಡಿ ಮಾಹಿತಿ ಪಡೆದುಕೊಳ್ಳಬಹುದು ಎಂದು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ತಿಳಿಸಿದ್ದಾರೆ.