
ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆಯ ಅಬ್ಬರ ಜೋರಾಗಿದೆ. ಹಲವು ಜಿಲ್ಲೆಗಳಲ್ಲಿ ಗುಡುಗು ಸಿಡಿಲಿನ ಆರ್ಭಟದೊಂದಿಗೆ ಮಳೆಯಾಗಿದೆ.
ಬೆಂಗಳೂರಿನಲ್ಲಿ ಮರ ಬಿದ್ದು ಮೂರು ವರ್ಷದ ಮಗು ಮೃತಪಟ್ಟ ಘಟನೆ ಬೆನ್ನಲ್ಲೇ ಇಂದು ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಮಹಾಮಳೆಗೆ ಮೊದಲ ಬಲಿಯಾಗಿದೆ. ಚಿಕ್ಕಮಗಳೂರು ತಾಲೂಕಿನ ಕುರುಬರಹಳ್ಳಿಯಲ್ಲಿ ಹೊಲದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಸಿಡಿಲು ಬಡಿದು 65 ವರ್ಷದ ನಾಗಮ್ಮ ಮೃತಪಟ್ಟಿದ್ದಾರೆ.
ಬೇಲೂರು ತಾಲೂಕಿನ ಹೆಬ್ಬಾಳ ತಿಮ್ಮನಹಳ್ಳಿಯ ನಾಗಮ್ಮ ಪುತ್ರಿಯ ಮನೆಗೆ ಶುಂಠಿ ಬಿತ್ತನೆಗೆ ಬಂದಿದ್ದರು. ಹೊಲದಲ್ಲಿ ಕೆಲಸ ಮಾಡುವಾಗಲೇ ಸಿಡಿಲು ಬಡಿದು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಹೊಲದಲ್ಲಿ ಕೆಲಸ ಮಾಡುತ್ತಿದ್ದ ಉಳಿದವರು ಅಪಾಯದಿಂದ ಪಾರಾಗಿದ್ದಾರೆ. ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.