ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಬಿಜೆಪಿಯಿಂದ ಉಚ್ಛಾಟನೆ ಮಾಡಿದ್ದು, ರಾಜ್ಯ ರಾಜಕೀಯ ವಲಯದಲ್ಲಿ ತೀವ್ರ ಸಂಚಲನ ಮೂಡಿಸಿದೆ. ಕೂಡಲ ಸಂಗಮದ ಬಸವ ಜಯಮೃತ್ಯುಂಜಯ ಸ್ವಾಮೀಜಿ, ಯತ್ನಾಳ್ ಉಚ್ಛಾಟನೆಗೆ ಪ್ರತಿಕ್ರಿಯಿಸಿ, ಎಲ್ಲಾ ಲಿಂಗಾಯತ ಶಾಸಕರು ಬಿಜೆಪಿ ತೊರೆಯುವಂತೆ ಕರೆ ನೀಡಿದ್ದಾರೆ.
ಧಾರವಾಡದಲ್ಲಿ ಮಾತನಾಡಿದ ಸ್ವಾಮೀಜಿ, “ಯತ್ನಾಳ್ ಅವರನ್ನು ಉಚ್ಛಾಟನೆ ಮಾಡಲು ಬಿ.ಎಸ್. ಯಡಿಯೂರಪ್ಪ ಮತ್ತು ಅವರ ಕುಟುಂಬವೇ ಕಾರಣ. ಬಿಜೆಪಿಯಲ್ಲಿರುವ ಪಂಚಮಸಾಲಿ ಶಾಸಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಇಲ್ಲದಿದ್ದರೆ ಪಂಚಮಸಾಲಿಗಳು ಬಿಜೆಪಿಯಿಂದ ಹೊರಬರಬೇಕು” ಎಂದು ಆಗ್ರಹಿಸಿದರು.
ಯತ್ನಾಳ್ ಎಂದಿಗೂ ಪಕ್ಷ ವಿರೋಧಿ ಚಟುವಟಿಕೆ ನಡೆಸಿಲ್ಲ. ಕಾಣದ ಕೈಗಳು ಅವರನ್ನು ಉಚ್ಛಾಟನೆ ಮಾಡುವಂತೆ ಮಾಡಿವೆ.ಯತ್ನಾಳ್ ಏನೇ ಮಾತನಾಡಿದರೂ ಅವರು ಉತ್ತರ ಕರ್ನಾಟಕ ಮತ್ತು ಹಿಂದುತ್ವದ ಬಗ್ಗೆಯೇ ಮಾತನಾಡಿದ್ದಾರೆ ಎಂದು ಸ್ವಾಮೀಜಿ ಸಮರ್ಥಿಸಿಕೊಂಡರು.
ಯತ್ನಾಳ್ ಉಚ್ಛಾಟನೆಯಿಂದ ಬಿಜೆಪಿ ತನ್ನ ಕಾಲ ಮೇಲೆ ತಾನೇ ಕಲ್ಲು ಹಾಕಿಕೊಂಡಿದೆ. ಇದರಿಂದ ಪಕ್ಷಕ್ಕೆ ಹಿನ್ನಡೆಯಾಗಲಿದೆ ಎಂದ ಸ್ವಾಮೀಜಿ, ನಾವು ಹೋರಾಟ ಮಾಡುತ್ತೇವೆ. ಈ ಹೋರಾಟ ಪ್ರಧಾನಿ ಮೋದಿ, ಸಚಿವ ಅಮಿತ್ ಶಾ ವಿರುದ್ಧ ಅಲ್ಲ. ಪಂಚಮಸಾಲಿಗಳ ನಾಯಕತ್ವ ತುಳಿದವರ ವಿರುದ್ಧ ಪ್ರತಿಭಟನೆ ಮಾಡುತ್ತೇವೆ ಎಂದರು.