
ತುಮಕೂರು: ಇಂದು ತುಮಕೂರಿನ ಸಿದ್ಧಗಂಗಾ ಮಠದ ಲಿಂ. ಶ್ರೀ ಶಿವಕುಮಾರ ಸ್ವಾಮೀಜಿಗಳ 118ನೇ ಜನ್ಮದಿನೋತ್ಸವ ತುಮಕೂರಿನ ಸಿದ್ದಗಂಗಾ ಮಠದಲ್ಲಿ ನಡೆಯಲಿದೆ. ಕಾರ್ಯಕ್ರಮದಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭಾಗವಹಿಸಲಿದ್ದಾರೆ.
ಶಿವಕುಮಾರ ಸ್ವಾಮೀಜಿಗಳ ಗದ್ದುಗೆ ವಿಶೇಷ ಅಲಂಕಾರ ಮಾಡಲಾಗಿದೆ. ಬೆಳಗಿನ ಜಾವ ವಿಶೇಷ ಪೂಜೆ, ರುದ್ರಾಭಿಷೇಕ, ಮಹಾಮಂಗಳಾರತಿ ನೆರವೇರಿಸಲಾಗಿದೆ. ಪೂಜೆಯಲ್ಲಿ ಸಿದ್ದಲಿಂಗ ಸ್ವಾಮೀಜಿ ಹಾಗೂ ವಿವಿಧ ಮಠಾಧೀಶರು ಭಾಗವಹಿಸಿದ್ದಾರೆ.
ಬೆಳಗ್ಗೆ 10.30 ಕ್ಕೆ ಸಿದ್ಧಗಂಗಾ ಮಠದಲ್ಲಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುವುದು. ಗೋಸಲ ಸಿದ್ದೇಶ್ವರ ರಂಗಮಂದಿರದಲ್ಲಿ ಸಮಾರಂಭ ನಡೆಯಲಿದೆ. ರಕ್ಷಣಾ ಸಚಿವ ರಾಜನಾಥ್ ಸಿಂಗ್, ಕೇಂದ್ರ ಸಚಿವ ವಿ. ಸೋಮಣ್ಣ, ಡಿಸಿಎಂ ಡಿ.ಕೆ. ಶಿವಕುಮಾರ್, ಸಚಿವರಾದ ಡಾ.ಜಿ. ಪರಮೇಶ್ವರ್, ಕೆ.ಎನ್. ರಾಜಣ್ಣ, ಶಾಸಕರಾದ ಸುರೇಶ್ ಗೌಡ, ಜ್ಯೋತಿ ಗಣೇಶ್ ಹಾಗೂ ವಿವಿಧ ಮಠಾಧೀಶರು ಭಾಗವಹಿಸಲಿದ್ದಾರೆ.