
ನವದೆಹಲಿ: ಗ್ರಾಮ ಪಂಚಾಯಿತಿ ನೌಕರರಿಗೆ ಇಎಸ್ಐ ಸೌಲಭ್ಯ ಕಲ್ಪಿಸುವಂತೆ ಕೇಂದ್ರ ಕಾರ್ಮಿಕ ಸಚಿವ ಡಾ. ಮನ್ ಸುಖ್ ಮಾಂಡವೀಯಾ ಅವರಿಗೆ ಉಡುಪಿ- ಚಿಕ್ಕಮಗಳೂರು ಲೋಕಸಭಾ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಮನವಿ ಸಲ್ಲಿಸಿದ್ದಾರೆ.
ಕರ್ನಾಟಕ ರಾಜ್ಯದ 5995 ಗ್ರಾಮ ಪಂಚಾಯಿತಿ ಸೇರಿದಂತೆ ದೇಶದಲ್ಲಿ 2,55,401 ಗ್ರಾಮ ಪಂಚಾಯಿತಿಗಳು ಕಾರ್ಯನಿರ್ವಹಿಸುತ್ತಿದ್ದು, 16,77,005 ಮಂದಿ ಸಿಬ್ಬಂದಿ ದುಡಿಯುತ್ತಿದ್ದಾರೆ. ಇವರಿಗೆ ಇಎಸ್ಐ ಆರೋಗ್ಯ ವಿಮೆ ಸೌಲಭ್ಯ ನೀಡಬೇಕೆಂದು ಮನವಿ ಮಾಡಿದ್ದಾರೆ.
ಬಡವರ ನಡುವೆ ಗ್ರಾಪಂಗಳಲ್ಲಿ ಕಡಿಮೆ ವೇತನಕ್ಕೆ ನೀರುಗಂಟಿ, ಜಾಡ ಮಾಲಿ, ವಾಟರ್ ಮೆನ್, ಕಂಪ್ಯೂಟರ್ ಆಪರೇಟರ್, ಜವಾನ ಸೇರಿದಂತೆ ವಿವಿಧ ಕೆಲಸಗಳಲ್ಲಿ ದುಡಿಯುತ್ತಿದ್ದಾರೆ. 10ಕ್ಕಿಂತ ಕಡಿಮೆ ಸಿಬ್ಬಂದಿ ಇರುವುದರಿಂದ ಇಎಸ್ಐ ಆರೋಗ್ಯ ವಿಮೆಯಿಂದ ವಂಚಿತರಾಗಿ ಸಂಕಷ್ಟ ಎದುರಿಸುತ್ತಿದ್ದಾರೆ. ಹಾಗಾಗಿ ಮಾನವೀಯ ನೆಲೆಯಲ್ಲಿ ಎಲ್ಲಾ ರಾಜ್ಯಗಳಿಂದ ಮಾಹಿತಿ ಪಡೆದು ಗ್ರಾಮ ಪಂಚಾಯಿತಿ ಸಿಬ್ಬಂದಿಗಳಿಗೆ ಇಎಸ್ಐ ಸೌಲಭ್ಯ ಕಲ್ಪಿಸಬೇಕೆಂದು ಕೋಟ ಶ್ರೀನಿವಾಸ ಪೂಜಾರಿ ಮನವಿ ಮಾಡಿದ್ದಾರೆ. ಈ ಕುರಿತು ಶೀಘ್ರವೇ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಮನವಿ ಸ್ವೀಕರಿಸಿದ ಸಚಿವರು ಭರವಸೆ ನೀಡಿದ್ದಾರೆ.