
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ದೆಹಲಿ ಪ್ರವಾಸಕ್ಕೆ ವಿಪಕ್ಷ ನಾಯಕ ಆರ್.ಅಶೋಕ್ ಲೇವಡಿ ಮಾಡಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರ ಕುರ್ಚಿ ಅಲುಗಾಡುತ್ತಿದೆ. ಹಾಗಾಗಿ ಕುರ್ಚಿ ಉಳಿಸಿಕೊಳ್ಳಲು ದೆಹಲಿ ಪ್ರವಾಸ ಕೈಗೊಂಡಿದ್ದಾರೆ ಎಂದಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಆರ್.ಅಶೋಕ್, ರಾಜ್ಯದ ಅಭಿವೃದ್ಧಿಗಾಗಿಯೋ ಅಥವಾ ಕೇಂದ್ರ ಸಚಿವರನ್ನು ಭೇಟಿ ಮಾಡಲೆಂದೋ ಸಿಎಂ ಸಿದ್ದರಾಮಯ್ಯ ದೆಹಲಿಗೆ ಹೋಗಿಲ್ಲ. ಬದಲಾಗಿ ಅವರ ಕುರ್ಚಿ ಉಳಿಸಿಕೊಳ್ಳಲು ಹೋಗಿದ್ದಾರೆ ಎಂದು ಕುಟುಕಿದರು.
ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಸಿಎಂ ಕುರ್ಚಿ ಕಿತ್ತುಕೊಳ್ಳುವ ಭಯಕ್ಕೆ ಕುರ್ಚಿ ಉಳಿಸಿಕೊಳ್ಳುವ ನಿಟ್ಟಿನಲ್ಲಿ ಸಿದ್ದರಾಮಯ್ಯ ಹೈಕಮಾಂಡ್ ಭೇಟಿಗೆ ಹೋಗಿದ್ದಾರೆ. ಇಲ್ಲಿ ಬೆಲೆ ಏರಿಕೆ ಮಾಡಿ, ಇವರು ದೆಹಲಿ ಪ್ರವಾಸ ಮಾಡುತ್ತಿದ್ದಾರೆ. ಕಾಂಗ್ರೆಸ್ ನಾಯಕರಿಗೆ ನಾಚಿಕೆಯಾಗಬೇಕು ಎಂದು ವಾಗ್ದಾಳಿ ನಡೆಸಿದರು.