BIG NEWS: ವಿಜಯೇಂದ್ರ, ಯಡಿಯೂರಪ್ಪ ಫೋಟೋ ಬಿಡಿಗಡೆ ಮಾಡಲೇ? ಗುತ್ತಿಗೆದಾರನ ಸಾವಿಗೂ ಪ್ರಿಯಾಂಕ್ ಖರ್ಗೆಗೂ ಸಂಬಂಧವಿಲ್ಲ ಎಂದ ಡಿಸಿಎಂ

ಬೆಂಗಳೂರು: ನಮ್ಮದು ಸ್ವಚ್ಛ ಆಡಳಿತದ ಸರ್ಕಾರ. ಗುತ್ತಿಗೆದಾರನ ಸಾವಿಗೂ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೂ ಯಾವುದೇ ಸಂಬಂಧವಿಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ಈ ಪ್ರಕರಣದಲ್ಲಿ ಪ್ರಿಯಾಂಕ್ ಖರ್ಗೆ ಅವರ ಪಾತ್ರವಿಲ್ಲ. ಆತ್ಮಹತ್ಯೆ ಪತ್ರದಲ್ಲಿಅವರ ವಿರುದ್ಧ ನೇರ ಆರೋಪವಿಲ್ಲ. ಬೇರೆಯವರ ಮೇಲೆ ಆರೋಪ ಮಾಡಿದಾಕ್ಷಣ ಇವರು ರಾಜೀನಾಮೆ ನೀಡಲು ಸಾಧ್ಯವಿಲ್ಲ. ಪ್ರಿಯಾಂಕ್ ಖರ್ಗೆ ಅವರ ಪ್ರಾಮಾಣಿಕತೆ ಬಗ್ಗೆ ನಮಗೆ ಗೊತ್ತಿದೆ. ಗುತ್ತಿಗೆದಾರನ ಸಾವಿನ ಬಗ್ಗೆ ಕಾನೂನು ಪ್ರಕಾರ ತನಿಖೆ ನಡೆಯುತ್ತದೆ ಎಂದರು.

ಸಾವಿಗೆ ಕಾರಣವಾಗಿರುವ ಆರೋಪ ಹೊತ್ತಿರುವ ರಾಜು ಕಪನೂರ್ ಸಿಎಂ ಹಾಗೂ ಪ್ರಿಯಾಂಕ ಖರ್ಗೆ ಜತೆ ಇರುವ ಫೋಟೋಗಳನ್ನು ಬಿ.ವೈ.ವಿಜಯೇಂದ್ರ ಬಿಡುಗಡೆ ಮಾಡಿರುವ ಬಗ್ಗೆ ಪ್ರತಿಕ್ರಿಯಿಸಿದ ಡಿಸಿಎಂ, ನನ್ನ ಜೊತೆ ವಿಜಯೇಂದ್ರ, ಯಡಿಯೂರಪ್ಪ ಅವರು ಇರುವ ಫೋಟೋಗಳಿವೆ. ನಮ್ಮ ಮನೆಗೆ ಬಂದವರು, ಮದುವೆ ಕಾರ್ಯಕ್ರಮಕ್ಕೆ ಹೋದಾಗ ಅನೇಕರು ನಮ್ಮ ಜೊತೆ ಫೋಟೋ ತೆಗೆಸಿಕೊಳ್ಳುತ್ತಾರೆ. ವಿಜಯೇಂದ್ರ, ಯಡಿಯೂರಪ್ಪ ಅವರು ಕ್ರಿಮಿನಲ್, ರೌಡಿಗಳು ಸೇರಿದಂತೆ ಯಾರೆಲ್ಲರ ಜತೆ ಫೋಟೋ ತೆಗೆಸಿಕೊಂಡಿದ್ದಾರೆ ಎಂದು ನಾನು ಬಿಡುಗಡೆ ಮಾಡಲೇ? ಅವರಿಗೆ ಬೇಕು ಎಂದರೆ ಬಿಡುಗಡೆ ಮಾಡುತ್ತೇನೆ. ಆರೋಪಿಗಳು ಹಾಗೂ ನಮ್ಮ ಜತೆ ಮಾತುಕತೆ, ವ್ಯವಹಾರ ನಡೆದಿರುವುದಕ್ಕೆ ದಾಖಲೆ ಇದ್ದರೆ ಆರೋಪ ಮಾಡಲಿ. ನಾವು ಉತ್ತಮವಾಗಿ ಸರ್ಕಾರ ನಡೆಸುತ್ತಿದ್ದು, ವಿರೋಧ ಪಕ್ಷದವರು ಸುಮ್ಮನೆ ಮಾತಾಡಬೇಕು ಎಂಬ ಕಾರಣಕ್ಕೆ ಮಾತನಾಡುತ್ತಾರೆ. ಮಾತಾಡಲಿ ಬಿಡಿ ಎಂದು ಹೇಳಿದರು.

ಬಿಜೆಪಿಯವರು ಮುತ್ತಿಗೆ ಹಾಕುವುದಾಗಿ ಹೇಳಿರುವ ಬಗ್ಗೆ, ಮುತ್ತಿಗೆ ಹಾಕಲಿ. ನನ್ನ ಸಹೋದರ ಸುರೇಶ್, ರಾಜರಾಜೇಶ್ವರಿ ನಗರದ ಕೆಲವು ಪ್ರಕರಣಗಳನ್ನು ಪ್ರಸ್ತಾಪಿಸಿದ್ದಾರೆ. ಅವೆಲ್ಲವನ್ನು ಸೇರಿಸಿ ಸಿಬಿಐಗೆ ವಹಿಸೋಣ. ಬಿಜೆಪಿ ಸರ್ಕಾರ ಇದ್ದಾಗ ನನ್ನ ಪ್ರಕರಣವನ್ನು ಮಾತ್ರ ಸಿಬಿಐಗೆ ನೀಡಿದ್ದರು. ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಡಿ.ಕೆ. ರವಿ ಸಾವು, ಸೌಜನ್ಯ ಸಾವು, ಪರೇಶ್ ಮೆಸ್ತಾ ಪ್ರಕರಣ ಸೇರಿದಂತೆ ಸುಮಾರು 12 ಪ್ರಕರಣಗಳನ್ನು ಸಿಬಿಐ ತನಿಖೆಗೆ ನೀಡಿದ್ದೆವು. ಬಿಜೆಪಿಯವರು ನನ್ನ ಪ್ರಕರಣದ ಜತೆ ಬಿಜೆಪಿ ಸಚಿವರ ಪ್ರಕರಣಗಳನ್ನು ಸಿಬಿಐಗೆ ನೀಡಬೇಕಿತ್ತು. ಯಾಕೆ ನೀಡಲಿಲ್ಲ? ಎಂದು ಪ್ರಶ್ನಿಸಿದರು.

ಪ್ರಿಯಾಂಕ್ ಖರ್ಗೆ ಅವರು ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ. ಅವರು ಯಾವ ತಪ್ಪು ಮಾಡಿದ್ದಾರೆ ಎಂದು ರಾಜೀನಾಮೆ ನೀಡಬೇಕು? ಪ್ರಿಯಾಂಕ್ ಖರ್ಗೆ ನಮ್ಮ ಪಕ್ಷದ ಧ್ವನಿ. ಅವರ ಮೇಲಿನ ಅಸೂಯೆಗೆ ವಿರೋಧ ಪಕ್ಷಗಳು ಈ ರೀತಿ ನಡೆದುಕೊಳ್ಳುತ್ತಿವೆ. ದಲಿತ ಸಮುದಾಯದ ನಾಯಕ ಇಷ್ಟು ದೊಡ್ಡ ಮಟ್ಟಕ್ಕೆ ಬೆಳೆಯುತ್ತಿರುವುದನ್ನು ಸಹಿಸಲು ಅವರಿಗೆ ಸಾಧ್ಯವಾಗುತ್ತಿಲ್ಲ. ಐಟಿ-ಬಿಟಿ ಇಲಾಖೆಯನ್ನು ಸಮರ್ಥವಾಗಿ ಮುನ್ನಡೆಸುತ್ತಿದ್ದಾರೆ. ಕೃಷ್ಣ ಅವರ ಸರ್ಕಾರದ ನಂತರ ಐಟಿ-ಬಿಟಿ ಕ್ಷೇತ್ರದಲ್ಲಿ ರಾಜ್ಯವನ್ನು ಯಶಸ್ವಿಯಾಗಿ ಮುನ್ನಡೆಸುತ್ತಿರುವುದು ಪ್ರಿಯಾಂಕ್ ಖರ್ಗೆ. ಹೀಗಾಗಿ ಅವರನ್ನು ಕೆಳಗಿಳಿಸುವ ಸಂಚು ಮಾಡುತ್ತಿದ್ದಾರೆ ಎಂದು ಕಿಡಿಕರೈದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read