ಉತ್ತರ ಪ್ರದೇಶದ ಮೊರಾದಾಬಾದ್‌ನ ತೀರ್ಥಂಕರ್ ಮಹಾವೀರ್ ವಿಶ್ವವಿದ್ಯಾಲಯದ ಆವರಣದಲ್ಲಿ ಮಳೆರಾಯನ ಅಟ್ಟಹಾಸಕ್ಕೆ ಐವರು ವಿದ್ಯಾರ್ಥಿಗಳು ಗಾಯಗೊಂಡಿರುವ ಆಘಾತಕಾರಿ ಘಟನೆ ನಡೆದಿದೆ.
ಭಾರಿ ಮಳೆ ಸುರಿಯುತ್ತಿದ್ದ ಕಾರಣ ಮರದ ಕೆಳಗೆ ಆಶ್ರಯ ಪಡೆದಿದ್ದ ವಿದ್ಯಾರ್ಥಿಗಳ ಮೇಲೆ ಮಿಂಚು ಎರಗಿದೆ. ಈ ಭಯಾನಕ ಕ್ಷಣಗಳು ಕ್ಯಾಂಪಸ್‌ನ ಸಿಸಿ ಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಇದರ ದೃಶ್ಯಗಳು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ.
ಏಪ್ರಿಲ್ 10 ರಂದು ರಾತ್ರಿ ಸುಮಾರು 8 ಗಂಟೆಯ ಸುಮಾರಿಗೆ ಈ ದುರ್ಘಟನೆ ಸಂಭವಿಸಿದೆ. ಮಿಂಚಿನ ತೀವ್ರತೆಗೆ ಐವರು ವಿದ್ಯಾರ್ಥಿಗಳು ಗಾಯಗೊಂಡಿದ್ದು, ಅವರಲ್ಲಿ ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದುಬಂದಿದೆ.
ಈ ಘಟನೆಯಿಂದ ಕ್ಯಾಂಪಸ್‌ನಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ಕೂಡಲೇ ಇತರ ವಿದ್ಯಾರ್ಥಿಗಳು ಗಾಯಗೊಂಡವರಿಗೆ ಸಹಾಯ ಮಾಡಲು ಧಾವಿಸಿದರು. ಸದ್ಯಕ್ಕೆ ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡಲಾಗುತ್ತಿದೆ.

