ಬೆಂಗಳೂರು: ಪತ್ನಿಯಿಂದಲೇ ಹತ್ಯೆಯಾದ ನಿವೃತ್ತ ಡಿಜಿ-ಐಜಿಪಿ ಓಂ ಪ್ರಕಾಶ್ ಪಾರ್ಥಿವ ಶರೀರದ ಅಂತ್ಯಕ್ರಿಯೆಯನ್ನು ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಗಿದೆ.
ಮರಣೋತ್ತರ ಪರೀಕ್ಷೆ ಬಳಿಕ ಪಾರ್ಥಿವ ಶರೀರವನ್ನು ಬೆಂಗಳೂರಿನ ಹೆಚ್.ಎಸ್.ಆರ್.ಲೇಔಟ್ ನಲ್ಲಿರುವ ಟೆನ್ನಿಸ್ ಕೋರ್ಟ್ ನಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಈ ವೇಳೆ ಹಿರಿಯ ಪೊಲೀಸ್ ಅಧಿಕಾರಿಗಳು, ಸಚಿವ ರಾಮ ಲಿಂಗಾರೆಡ್ಡಿ ಸೇರಿದಂತೆ ಹಲವರು ಅಂತಿಮ ದರ್ಶನ ಪಡೆದರು.
ಬಳಿಕ ಪಾರ್ಥಿವಶರೀರವನ್ನು ವಿಲ್ಸನ್ ಗಾರ್ಡನ್ ಚಿತಾಗಾರಕ್ಕೆ ತರಲಾಗಿದ್ದು, ಅಲ್ಲಿ ಕುಟುಂಬದ ಸದಸ್ಯರು, ಸಂಬಂಧಿಕರು ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದರು. ಬಳಿಕ ಪೊಲೀಸ್ ಪಡೆಯಿಂದ ಗಾಳಿಯಲ್ಲಿ ಮೂರು ಸುತ್ತು ಗುಂಡು ಹಾರಿಸಿ ಓಂ ಪ್ರಕಾಶ್ ಪಾರ್ಥಿವ ಶರೀರಕ್ಕೆ ಪೊಲೀಸರಿಂದ ಅಂತಿಮ ನಮನ ಸಲ್ಲಿಸಲಾಯಿತು. ಬಳಿಕ ಪುತ್ರ ಕಾರ್ತಿಕೇಶ್ ನಿಂದ ಪಾರ್ಥಿವ ಶರೀರಕ್ಕೆ ಅಂತಿಮ ವಿಧಿ-ವಿಧಾನ ನೆರವೇರಿಸಲಾಯಿತು. ನಂತರ ಅಗ್ನಿಸ್ಪರ್ಶ ಮಾಡಲಾಯಿತು. ನಿವೃತ್ತ ಡಿಜಿ-ಐಜಿಪಿ ಓಂ ಪ್ರಕಾಶ್ ಪಂಚಭೂತಗಳಲ್ಲಿ ಲೀನರಾಗಿದ್ದಾರೆ.