ವಿಜಯನಗರ: ವಿಜಯನಗರ ಸಾಮ್ರಾಟ ಶ್ರೀಕೃಷ್ಣದೇವರಾಯರ ಸಮಾಧಿ ಮೇಲೆ ಮಾಂಸ ಶುದ್ಧೀಕರಣ ಮಾದಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಗಂಗಾವತಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಮೂವರ ವಿರುದ್ಧ ಪ್ರಕರಣ ದಾಖಲಾಗಿದೆ. ಆನೆಗುಂದಿ ಗ್ರಾಮದ ಹನುಮಂತ, ಫಕೀರಪ್ಪ, ಹುಲಗಪ್ಪ ಎಂಬುವವರ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಆನೆಗುಂದಿ ಬಳಿಯ ತುಂಗಭದ್ರಾ ನದಿಯ ದಡದಲ್ಲಿ ವಿಜಯನಗರ ಸಾಮ್ರಾಜ್ಯದ ಶ್ರೇಷ್ಠ ಅರಸ ಶ್ರೀಕೃಷ್ಣದೇವರಾಯರ ಸಮಾಧಿಯಿದೆ. ಈ ಸಮಾಧಿ ಮೇಲೆ ಕಿಡಿಗೇಡಿಗಳು ಮಾಂಸ ಸ್ವಚ್ಛಗೊಳಿಸಿದ್ದಾರೆ. 64 ಕಂಬಗಳನ್ನು ಒಳಗೊಂಡಿರುವ ಕೃಷ್ಣದೇವರಾಯರ ಸಮಾಧಿ ಮಂಟಪದ ಒಂದು ಕಂಬಕ್ಕೆ ಮೇಕೆ ಕಟ್ಟಿಹಾಕಿ ಪಕ್ಕದಲ್ಲೇ ಮಾಂಸ ಸ್ವಚ್ಛಗೊಳಿಸಿದ್ದಾರೆ. ಈ ವಿಡಿಯೋ ವೈರಲ್ ಆಗಿತ್ತು. ಕೃತ್ಯದ ಬಗ್ಗೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆಕ್ರೋಶ ವ್ಯಕ್ತಪಡಿಸಿದ್ದರು. ಪ್ರವಾಸೋದ್ಯಮ ಇಲಾಖೆ ಹಾಗೂ ಸರ್ಕಾರ ಎಚ್ಚೆತ್ತುಕೊಳ್ಲಬೇಕು ಎಂದು ಆಗ್ರಹಿಸಿದ್ದರು.
ವಿಡಿಯೋ ವೈರಲ್ ಆಗುತ್ತಿದ್ದಂತೆ ಇಂದು ಪ್ರವಾಸೋದ್ಯಮ ಸಚಿವ ಹೆಚ್.ಕೆ.ಪಾಟೀಲ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು. ಈ ವಿಷಯವನ್ನು ರಾಜಕೀಯಗೊಳಿಸಬಾರದು. ಅಪಮಾನ ಆಗಿದ್ದನ್ನು ನಾವು ಒಪ್ಪಿಕೊಳ್ಳುತ್ತೇವೆ. ಸಮಾಧಿ ಮಂಟಪದಲ್ಲಿ ಅಚಾತುರ್ಯವಾಗಿದೆ ಎಂದು ಇಲ್ಲಿಗೆ ಬಂದಿದ್ದೇನೆ. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.