ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ಭಯೋತ್ಪಾದಕ ದಾಳಿಯ ಹಿನ್ನೆಲೆಯಲ್ಲಿ ಪರಿಸ್ಥಿತಿಯನ್ನು ಪರಿಶೀಲಿಸಲು ಮತ್ತು ಸರ್ಕಾರದ ಕಾರ್ಯತಂತ್ರದ ಬಗ್ಗೆ ಚರ್ಚಿಸಲು ಕೇಂದ್ರ ಸರ್ಕಾರ ಗುರುವಾರ ಸರ್ವಪಕ್ಷ ಸಭೆ ಕರೆದಿದೆ.
ಗುರುವಾರ ಸಂಜೆ 6 ಗಂಟೆಗೆ ಸಂಸತ್ತಿನ ಅನೆಕ್ಸ್ ನಲ್ಲಿ ಸಭೆ ನಡೆಯುವ ಸಾಧ್ಯತೆಯಿದೆ. ಈ ಸಭೆಯ ಅಧ್ಯಕ್ಷತೆಯನ್ನು ರಕ್ಷಣಾ ಸಚಿವ ರಾಜನಾಥ್ ಸಿಂಗ್ ವಹಿಸಲಿದ್ದು, ಕೇಂದ್ರ ಗೃಹ ಸಚಿವ ಅಮಿತ್ ಶಾ ಭಾಗವಹಿಸಲಿದ್ದಾರೆ. ಮೂಲಗಳ ಪ್ರಕಾರ, ಸಭೆಯಲ್ಲಿ ಹಲವಾರು ಕ್ಯಾಬಿನೆಟ್ ಮಂತ್ರಿಗಳು ಹಾಜರಾಗುವ ನಿರೀಕ್ಷೆಯಿದೆ.
ಪಕ್ಷದ ಮೂಲಗಳ ಪ್ರಕಾರ, ಕೇಂದ್ರ ಸಚಿವರಾದ ಅಮಿತ್ ಶಾ ಮತ್ತು ರಾಜನಾಥ್ ಸಿಂಗ್ ಅವರು ಸಭೆಯ ಬಗ್ಗೆ ಎಲ್ಲಾ ರಾಜಕೀಯ ಪಕ್ಷಗಳೊಂದಿಗೆ ಮಾತನಾಡಿದ್ದಾರೆ. ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದಕ ದಾಳಿಯನ್ನು ಪಕ್ಷಾತೀತವಾಗಿ ನಾಯಕರು ಖಂಡಿಸಿದ್ದಾರೆ ಮತ್ತು ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯನ್ನು ತೀವ್ರಗೊಳಿಸುವಂತೆ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಇದಕ್ಕೂ ಮುನ್ನ ಪ್ರಧಾನಿ ನರೇಂದ್ರ ಮೋದಿ ಅವರು ಭದ್ರತಾ ಕ್ಯಾಬಿನೆಟ್ ಸಮಿತಿಯ (ಸಿಸಿಎಸ್) 2.5 ಗಂಟೆಗಳ ಸುದೀರ್ಘ ಸಭೆ ನಡೆಸಿ ಪರಿಸ್ಥಿತಿಯ ಬಗ್ಗೆ ಮಾಹಿತಿ ಪಡೆದರು.