ಬೆಂಗಳೂರು: ಹೈಕೋರ್ಟ್ ಸೂಚನೆ ಮೇರೆಗೆ ಕರ್ನಾಟಕದಲ್ಲಿ ಬೈಕ್ ಕ್ಯಾಬ್ ನಿಲ್ಲಿಸುವಂತೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಆದೇಶ ನೀಡಿದ್ದಾರೆ.
ಈ ಮೂಲಕ ಆಟೋ, ಕ್ಯಾಬ್ ಚಾಲಕರ ಹಲವು ವರ್ಷಗಳ ಹೋರಾಟಕ್ಕೆ ಗೆಲುವು ಸಿಕ್ಕಂತಾಗಿದ್ದು, ರಾಜ್ಯದಲ್ಲಿ ಇನ್ಮುಂದೆ ಬೈಕ್ ಕ್ಯಾಬ್ ನಿಷೇಧಿಸಲಾಗಿದೆ. ರಾಜ್ಯದಲ್ಲಿ ಬೈಕ್ ಕ್ಯಾಬ್ ನಿಲ್ಲಿಸುವಂತೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ಇಲಾಖೆ ಕಾರ್ಯದರ್ಶಿ ಮತ್ತು ಸಾರಿಗೆ ಇಲಾಖೆ ಆಯುಕ್ತರಿಗೆ ಪತ್ರ ಬರೆದಿದ್ದಾರೆ.
ಉಬರ್, ಎ ಎನ್ ಐ ಟೆಕ್ನಾಲಜೀಸ್ ಸೇರಿದಂತೆ ಹಲವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ್ದ ಹೈಕೋರ್ಟ್ ಆರು ವರಗಳ ಒಳಗಾಗಿ ರಾಜ್ಯದಲ್ಲಿ ಬೈಕ್ ಟ್ಯಾಕ್ಸಿಗಳನ್ನು ನಿಲ್ಲಿಸುವಂತೆ ಆದೇಶ ಹೊರಡಿಸಿತ್ತು. ಸಚಿವ ರಾಮಲಿಂಗಾರೆಡ್ಡಿ ನ್ಯಾಯಾಲಯದ ತೀರ್ಪನ್ನು ಸ್ವಾಗತಿಸಿದ್ದಾರೆ. ಅಗತ್ಯ ನಿಯಮಗಳನ್ನು ರೂಪಿಸಲು ಸರ್ಕಾರಕ್ಕೆ ಮೂರು ತಿಂಗಳ ಕಾಲಾವಕಾಶ ನೀಡಲಾಗಿದೆ.