ಬೆಳಗಾವಿ: ಬೆಳಗಾವಿಯ ಸಿಪಿಎಡ್ ಮೈದಾನದಲ್ಲಿ ಕೇಂದ್ರ ಸರ್ಕಾರದ ವಿರುದ್ಧದ ಕಾಂಗ್ರೆಸ್ ಬೃಹತ್ ಪ್ರತಿಭಟನಾ ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಷಣದ ವೇಳೆ ಹೈಡ್ರಾಮಾ ನಡೆಯಿತು. ಬಿಜೆಪಿ ಕಾರ್ಯಕರ್ತರು ಸಮಾವೇಶಕ್ಕೆ ಕೆಲ ಕಾಲ ಅಡ್ಡಿಪಡಿಸಿದ ಘಟನೆ ನಡೆದಿದೆ.
ಸಮಾವೇಶವನ್ನು ಉದ್ದೇಶಿಸಿ ಸಿಎಂ ಸಿದ್ದರಾಮಯ್ಯ ಭಾಷಣ ಆರಂಭಿಸುತ್ತಿದ್ದಂತೆಯೇ ಸಮಾವೇಶದಲ್ಲಿ ನೆರೆದಿದ್ದ ಜನರ ಹಿಂದೆ ಕಾಂಗ್ರೆಸ್ ಕಾರ್ಯಕರ್ತರಂತೆ ಕುಳಿತಿದ್ದ ಬಿಜೆಪಿ ಮಹಿಳಾ ಕಾರ್ಯಕರ್ತರು ಕಪ್ಪುಪಟ್ಟಿ ಪ್ರದರ್ಶಿಸಿ, ರಾಜ್ಯ ಸರ್ಕಾರದ ವಿರುದ್ಧ ದಿಕ್ಕಾರ ಕೂಗಲಾರಂಭಿಸಿದ್ದಾರೆ. ಏಕಾಏಕಿ ವೇದಿಕೆಯತ್ತ ಮುನ್ನುಗ್ಗಲು ಯತ್ನಿಸಿದ್ದಾರೆ. ಈ ವೇಳೆ ಸ್ಥಳದಲ್ಲಿ ಕೆಲ ಕಾಲ ಗೊಂದಲದ ವಾತಾವರಣ ನಿರ್ಮಾಣವಾಗಿದೆ.
ಸಿಎಂ ಸಿದ್ದರಾಮಯ್ಯ ಕೆಲ ಕಾಲ ಭಾಷಣವನ್ನು ನಿಲ್ಲಿಸಿ, ಬೆಳಗಾವಿ ಪೊಲೀಸ್ ವರಿಷ್ಠಾಧಿಕಾರಿ ಯಾರು? ಪೊಲೀಸರು ಏನು ಮಾಡುತ್ತಿದ್ದೀರಾ? ಎಂದು ಗರಂ ಆದರು. ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಸಮಾವೇಶಕ್ಕೆ ಬಂದು ಅಡ್ಡಿಪಡಿಸುತ್ತಿದ್ದರೂ ಸುಮ್ಮನೆ ಕುಳಿತಿದ್ದೀರಾ? ಎಲ್ಲರನ್ನೂ ಹೊರ ಕಳುಹಿಸಿ ಎಂದು ಗುಡುಗಿದರು.
ಸಮಾವೇಶದ ಸ್ಥಳದಲ್ಲಿ ಜಮಾವಣೆಗೊಂಡಿದ್ದ ಬಿಜೆಪಿ ಮಹಿಳಾ ಕಾರ್ಯಕರ್ತರು ಹಾಗೂ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಕೆಲಕಾಲ ವಾಗ್ವಾದ ನಡೆಯಿತು. ತಕ್ಷ ಪೊಲೀಸರು ಬಿಜೆಪಿ ಮಹಿಳಾ ಕಾರ್ಯಕರ್ತರನ್ನು ವಶಕ್ಕೆ ಪಡೆದು, ಪರಿಸ್ಥಿತಿ ತಿಳಿಗೊಳಿಸಿದರು.