ಬೆಂಗಳೂರು: ರಾಜ್ಯದ ಪ್ರಮುಖ ಸ್ಥಳಗಳಲ್ಲಿ ಭದ್ರತೆ ಹೆಚ್ಚಿಸಲಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.
ಪಹಲ್ಗಾಂ ನಲ್ಲಿ ಉಗ್ರರು 26 ಜನ ಪ್ರವಾಸಿಗರನ್ನು ಬಲಿಪಡೆದಿದ್ದಕ್ಕೆ ಪ್ರತೀಕಾರವಾಗಿ ಭಾರತೀಯ ಸೇನೆ ಆಪರೇಷನ್ ಸಿಂಧೂರ್ ಕಾರ್ಯಾಚಾರಣೆ ಮೂಲಕ ಪಾಕಿಸ್ತಾನದಲ್ಲಿ ಉಗ್ರರ ನೆಲೆಗಳ ಮೇಲೆ ಕ್ಷಿಪಣಿದಾಳಿ ನಡೆಸಿ ಧ್ವಂಸಗೊಳಿಸಿದ್ದು, ಕಾರ್ಯಾಚಾರಣೆಯಲ್ಲಿ ಹಲವು ಉಗ್ರರು ಸಾವನ್ನಪ್ಪಿದ್ದಾರೆ. ಭಾರತ ಹಾಗೂ ಪಾಕಿಸ್ತಾನದ ನಡುವೆ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದ್ದು, ಪಾಕಿಸ್ತಾನ ಭಾರತದ ಮೇಲೆ ಪ್ರತಿದಾಳಿಗೆ ಸಂಚು ನಡೆಸಿದೆ ಎನ್ನಲಾಗಿದೆ.
ಈ ಹಿನ್ನೆಲೆಯಲ್ಲಿ ಉಗ್ರರ ದಾಳಿ ಭೀಟಿ ಹಿನ್ನೆಲೆಯಲ್ಲಿ ದೇಶಾದ್ಯಂತ ಪ್ರಮುಖ ಸ್ಥಳಗಳಲ್ಲಿ ಕಟ್ಟೆಚ್ಚರಕ್ಕೆ ಸೂಚಿಸಲಾಗಿದೆ. ಕರಾವಳಿ ಪ್ರದೇಶ, ಜನನಿಬಿಡ ಪ್ರದೇಶ ಸೇರಿದಂತೆ ಎಲ್ಲೆಡೆ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಅದರಂತೆ ರಾಜ್ಯದಲ್ಲಿಯೂ ಭದ್ರತೆ ಹೆಚ್ಚಿಸಲಾಗಿದೆ.
ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಪರಮೇಶ್ವರ್, ರಾಜ್ಯದ ಪ್ರಮುಖ ಸ್ಥಳಗಳಲ್ಲಿ ಹೆಚ್ಚುವರಿ ಭದ್ರತೆ ನಿಯೋಜಿಸಲಾಗಿದೆ. ಸ್ಪೆಷಲ್ ಪೋರ್ಸ್ ಗಳನ್ನು ಭದ್ರತೆಗಾಗಿ ನಿಯೋಜಿಸಲಾಗಿದೆ ಎಂದರು.
ಉತ್ತರ ಕನ್ನಡ ಜಿಲ್ಲೆಯ ಕೈಗಾ ಅಣುಸ್ಥಾವರ, ರಾಯಚೂರಿನ ವಿದ್ಯುತ್ ಘಟಕ, ಮಂಡ್ಯ ಜಿಲ್ಲೆಯ ಕೆ.ಆರ್.ಎಸ್ ಡ್ಯಾಂ ಸೇರಿದಂತೆ ಹಲವು ಆಯಕಟ್ಟಿನ, ಪ್ರಮುಖ ಸ್ಥಳಗಳಲ್ಲಿ ಬಿಗಿ ಭದ್ರತೆ ಕಲ್ಪಿಸಲಾಗಿದೆ ಎಂದು ತಿಳಿಸಿದರು.
ರಾಜ್ಯದ ಒಳಗಡೆ ಕೆಲ ಸ್ಲೀಪರ್ ಸೆಲ್ ಗಳು ಆಕ್ಟೀವ್ ಆಗಿವೆ. ಹೀಗಾಗಿ ಹೆಚ್ಚಿನ ನಿಗಾ ವಹಿಸಲು ಕೇಂದ್ರ ಗೃಹ ಇಲಾಖೆ ಸೂಚನೆ ನೀಡಿದ್ದು, ಈ ನಿಟ್ತಿನಲ್ಲಿ ಕಟ್ಟೆಚ್ಚರ ವಹಿಸಲಾಗಿದೆ ಎಂದರು.