ಬೆಂಗಳೂರು: ಹುಟ್ಟುಹಬ್ಬಕ್ಕೆ ಶುಭಕೋರಿ ಫ್ಲೆಕ್ಸ್ ಹಾಕಿದ್ದಕ್ಕೆ ಪಕ್ಷದ ಕಾರ್ಯಕರ್ತರ ನಡೆಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಬೇಸರ ವ್ಯಕ್ತಪಡಿಸಿದ್ದಾರೆ.
ನಾಳೆ ಮೇ 15ರಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಹುಟ್ಟುಹಬ್ಬ. ಆದರೆ ಈ ಬಾರಿ ಡಿಸಿಎಂ ಡಿ.ಕೆ.ಶಿವಕುಮಾರ್ ಹುಟ್ಟುಹಬ್ಬ ಆಚರಣೆ ಮಾಡುತ್ತಿಲ್ಲ. ಭಾರತ-ಪಾಕಿಸ್ತಾನದ ನಡುವೆ ಉದ್ವಿಗ್ನ ಸ್ಥಿತಿ, ಭಾರತೀಯ ಸೇನೆ ತಮ್ಮ ಪ್ರಾಣ ಪಣಕ್ಕಿಟ್ಟು ಉಗ್ರರ ವಿರುದ್ಧ ಹೋರಾಟ ನಡೆಸುತ್ತಿರುವ ಇಂತಹ ಸಂದರ್ಭದಲ್ಲಿ ಹುಟ್ಟುಹಬ್ಬದ ಸಂಭ್ರಮಾಚರಣೆ ಸೂಕ್ತವಲ್ಲ ಎಂಬ ಕಾರಣಕ್ಕೆ ಈ ಬಾರಿ ಜನ್ಮದಿನ ಆಚರಿಸುವುದಿಲ್ಲ ಎಂದು ಈ ಹಿಂದೆಯೇ ಹೇಳಿಕೆ ನೀಡಿದ್ದರು. ಅಲ್ಲದೇ ಇಂದು ಟ್ವೀಟ್ ಮೂಲಕವೂ ತಾವು ನಾಳೆ ಬೆಂಗಳೂರಿನಲ್ಲಿ ಇರಲ್ಲ. ಯಾರೂ ತಮ್ಮನ್ನು ಭೇಟಿಗಾಗಿ ಮನೆಯ ಬಳಿ ಬರಬೇಡಿ ಎಂದು ಮನವಿ ಮಾಡಿದ್ದರು.
ಆದಾಗ್ಯೂ ಪಕ್ಷದ ಕಾರ್ಯಕರ್ತರು ಡಿ.ಕೆ.ಶಿವಕುಮಾರ್ ಹುಟ್ಟುಹಬ್ಬಕ್ಕೆ ಶುಭಕೋರಿ ಫ್ಲೆಕ್ಸ್, ಬ್ಯಾನರ್ ಅಳವಡಿಸಿದ್ದಾರೆ. ಇದರಿಂದ ಅಸಮಾಧಾನಗೊಂಡಿರುವ ಡಿಸಿಎಂ, ತಕ್ಷಣ ಫ್ಲೆಕ್ಸ್, ಬ್ಯಾನರ್ ತೆರವು ಮಾಡುವಂತೆ ಬಿಬಿಎಂಪಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.