ಬೆಂಗಳೂರು: ತಜ್ಞ ವೈದ್ಯರ ಕೊರತೆ ನೀಗಿಸಲು ಮುಂದಾಗಿರುವ ವೈದ್ಯಕೀಯ ಶಿಕ್ಷಣ ಇಲಾಖೆ ಸೂಪರ್ ಸ್ಪೆಷಾಲಿಟಿ ನಿವೃತ್ತಿ ವಯಸ್ಸನ್ನು 60 ರಿಂದ 65 ವರ್ಷಕ್ಕೆ ಹೆಚ್ಚಿಸಿ ಆದೇಶ ಹೊರಡಿಸಿದೆ.
ಸೂಪರ್ ಸ್ಪೆಷಾಲಿಟಿ ಹುದ್ದೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ 232 ತಜ್ಞ ವೈದ್ಯರ ಪೈಕಿ 24 ಮಂದಿ ಪ್ರಸಕ್ತ ಸಾಲಿನಲ್ಲಿ 60 ವರ್ಷ ಪೂರ್ಣಗೊಳಿಸುತ್ತಿದ್ದಾರೆ. ಈ ವೈದ್ಯರನ್ನು ಹಾಲಿ ವೇತನ ಶ್ರೇಣಿಯಲ್ಲಿಯೇ ನಿವೃತ್ತಿ ಹೊಂದುವವರೆಗೆ ಮುಂದುವರೆಸಲು ತೀರ್ಮಾನ ಕೈಗೊಳ್ಳಲಾಗಿದೆ. ವೈದ್ಯಕೀಯ ಶಿಕ್ಷಣ ಇಲಾಖೆಯ 22 ಸ್ವಾಯತ್ತ ವೈದ್ಯಕೀಯ ಕಾಲೇಜುಗಳು, 10 ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳು ಕಾರ್ಯನಿರ್ವಹಿಸುತ್ತಿವೆ. ಈ ಸಂಸ್ಥೆಗಳಲ್ಲಿ ಒಟ್ಟು 508 ಸೂಪರ್ ಸ್ಪೆಷಾಲಿಟಿ ಹುದ್ದೆಗಳು ಮಂಜೂರಾಗಿದ್ದು, 232 ವೈದ್ಯರು ಕಾರ್ಯನಿರ್ವಹಿಸುತ್ತಿದ್ದಾರೆ. 276 ಹುದ್ದೆಗಳು ಖಾಲಿ ಇವೆ. ರಾಜ್ಯದಲ್ಲಿ ಸೂಪರ್ ಸ್ಪೆಷಾಲಿಟಿ ವೈದ್ಯರ ಕೊರತೆಯಿಂದ ವೈದ್ಯಕೀಯ ವಿದ್ಯಾರ್ಥಿಗಳಿಗೆ ಬೋಧನೆ ಮತ್ತು ರೋಗಿಗಳಿಗೆ ಚಿಕಿತ್ಸೆ ನೀಡುವಲ್ಲಿ ಸಮಸ್ಯೆಯಾಗುತ್ತಿರುವುದರಿಂದ ತಜ್ಞ ವೈದ್ಯರ ನಿವೃತ್ತಿ ವಯಸ್ಸನ್ನು 60 ರಿಂದ 65 ವರ್ಷಕ್ಕೆ ಹೆಚ್ಚಳ ಮಾಡಲಾಗಿದೆ.