ಬೆಂಗಳೂರು: ಕರ್ನಾಟಕ ಸೇರಿದಂತೆ ದಕ್ಷಿಣ ಭಾರತದ ವಿವಿಧ ರಾಜ್ಯಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರ್ನಾಟಕ, ಕೇರಳ, ತಮಿಳುನಾಡು, ಪುದಿಚೆರಿಗಳಲ್ಲಿ ವರುಣಾರ್ಭಟ ಹೆಚ್ಚಲಿದ್ದು, ಜನರು ಮುಂಜಾಗೃತವಹಿಸುವಂತೆ ಸೂಚಿಸಿದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಕಟ್ಟಪ್ಪಣೆ ಮಾಡಲಾಗಿದೆ.
ಮುಂಗಾರು ಕೇರಳ ಪ್ರವೇಶಿಸುತ್ತಿರುವ ಹಿನ್ನೆಲೆಯಲ್ಲಿ ಸಮುದ್ರದಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿದ್ದು, ಸಮುದ್ರ ತೀರದ ಜನರು ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.
ಇನ್ನು ಈಗಾಗಲೇ ಕರ್ನಾಟಕದಲ್ಲಿ ಭಾರಿ ಮಳೆಯಾಗುತ್ತಿದ್ದು, ಅದರಲ್ಲಿಯೂ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಮೇ 27ರವರೆಗೆ ಮಳೆ ಆರ್ಭಟ ಇನ್ನಷ್ಟು ತೀವ್ರಗೊಳ್ಳಲಿದೆ. ಈ ಹಿನ್ನೆಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಧಾರಾಕಾರ ಮಳೆಯಾಗುತ್ತಿದ್ದು, ಮಳೆಯ ಅಬ್ಬರ ಮತ್ತಷ್ಟು ಜೋರಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.