ಮೈಸೂರು: ರಾಜ್ಯದಲ್ಲಿ ಭಾರಿ ಮಲೆಯಿಂದಾಗಿ ಜಿಲ್ಲೆ ಜಿಲ್ಲೆಗಳಲ್ಲಿ ಅವಾಂತರಗಳು ಸೃಷ್ಟಿಯಾಗಿವೆ. ಜನಜೀವನ ಅಸ್ತವ್ಯಸ್ಥಗೊಂಡಿದೆ. ಮಂಗಾರು ಪೂರ್ವ ಮಳೆಯಿಂದಾಗಿ ಕೊಡಗು, ಮೈಸೂರಿಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಅಂಗನವಾಡಿ ಕೇಂದ್ರ ಹಾಗೂ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಮಳೆ ಅವಾಂತರ ಹಿನ್ನೆಲೆಯಲ್ಲಿ ಕೊಡಗು ವಿಶ್ವವಿದ್ಯಾಲಯ ವ್ಯಾಪ್ತಿಯ ಎಲ್ಲ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಮೈಸೂರು ಜಿಲ್ಲೆಯಲ್ಲಿ ಅಂಗನವಾಡಿ ಕೇಂದ್ರಗಳಿಗೆ ರಜೆ ನೀಡಲಾಗಿದೆ.
ಕೊಡಗು ಜಿಲ್ಲೆಯಾದ್ಯಂತ ಧಾರಾಕಾರ ಮಳೆಯಾಗುತ್ತಿದ್ದು, ನದಿಗಳು ಪ್ರವಾಹದ ರೀತಿಯಲ್ಲಿ ಉಕ್ಕಿ ಹರಿಯುತ್ತಿವೆ. ನದಿ ಪಾತ್ರದ ಜನರ ಬದುಕು ದುಸ್ತರವಾಗಿದೆ. ಈ ಹಿನ್ನೆಲೆಯಲ್ಲಿ ಎರಡು ದಿನಗಳ ಕಾಲ ಕೊಡಗಿನಲ್ಲಿ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಕೊಡಗು ವಿಶ್ವವಿದ್ಯಾಲಯ ವ್ಯಾಪ್ತಿಗೆ ಒಳಪಡುವ ಎಲ್ಲ ಕಾಲೇಜುಗಳಿಗೆ ಮೇ 26 ಮತ್ತು 27 ಎರಡು ದಿನಗಳ ಕಾಲ ರಜೆ ಘೋಷಣೆ ಮಾಡಲಾಗಿದೆ.
ಇದೇ ವೇಳೆ ಮೈಸೂರಿನಲ್ಲಿಯೂ ವರುಣಾರ್ಭಟ ಹೆಚ್ಚುತ್ತಿದ್ದು, ಮೈಸೂರಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಇಂದು ಅಂಗನವಾಡಿ ಕೇಂದ್ರಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಲಕ್ಷ್ಮೀಕಾಂತ್ ರೆಡ್ಡಿ ಆದೇಶ ಹೊರಡಿಸಿದ್ದಾರೆ.