ಬೆಂಗಳೂರು: ಶಾಸಕರಾದ ಶಿವರಾಮ್ ಹೆಬ್ಬಾರ್ ಹಾಗೂ ಎಸ್.ಟಿ.ಸೋಮಶೇಖರ್ ಅವರನ್ನು ಬಿಜೆಪಿಯಿಂದ ಉಚ್ಛಾಟನೆ ಮಾಡಿ ಹೈಕಮಾಂಡ್ ಆದೇಶ ಹೊರಡಿಸಿದೆ. ಹೈಕಮಾಂಡ್ ನಿರ್ಧಾರವನ್ನು ಸ್ವಾಗತಿಸುತ್ತೇನೆ ಎಂದು ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ವಿಜಯೇಂದ್ರ, ಹೆಬ್ಬಾರ್ ಹಾಗೂ ಸೋಮಶೇಖರ್ ಏನು ಪಕ್ಷ ವಿರೋಧಿ ಚಟುವಟಿಕೆ ಮಾಡಿದ್ದಾರೆ ಎಂಬುದು ಅವರಿಗೂ ಗೊತ್ತಿದೆ. ಅವರ ಉಚ್ಛಾಟನೆ ಸ್ವಾಗತಾರ್ಹ. ಬಿಜೆಪಿ ಅಧಿಕಾರಕ್ಕೆ ಬಂದಾಗ ಅವರಿಗೆ ಒಳ್ಳೆಯ ಸ್ಥಾನಮಾನ ಕೊಡಲಾಗಿತ್ತು. ಆದರೆ ವಿಪಕ್ಷದಲ್ಲಿ ಕೂರಬೇಕಾದರೆ ಅವರಿಗೆ ಕಷ್ಟವಾಯಿತು ಎಂದರು.
ಇದೇ ವೇಳೆ ಶಿವರಾಮ್ ಹೆಬ್ಬಾರ್ ಹಾಗೂ ಎಸ್.ಟಿ.ಸೋಮಶೇಖರ್ ಅವರನ್ನು ಬಿಜೆಪಿಯಿಂದ ಉಚ್ಛಾಟಿಸಲು ಅವರೇನು ವಿಧಾನಸೌಧದಲ್ಲಿ ರೇಪ್ ಮಾಡಿರಲಿಲ್ಲ, ಹೆಚ್ ಐ ವಿ ಇಂಜಕ್ಷನ್ ಕೂಡ ನೀಡಿರಲಿಲ್ಲವಲ್ಲಾ? ಎಂಬ ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿಗೆ ಪ್ರತಿಕ್ರಿಯಿಸಿದ ವಿಜಯೇಂದ್ರ, ಇದು ನಮ್ಮ ಪಕ್ಷದ ಆಂತರಿಕ ವಿಚಾರ. ಇದರ ಬಗ್ಗೆ ಡಿ.ಕೆ.ಶಿವಕುಮಾರ್ ತಲೆಕೆಡಿಸಿಕೊಳ್ಳುವುದು ಬೇಡ ಎಂದರು.