ಬೆಂಗಳೂರು : ಪರಿಶಿಷ್ಟ ಜಾತಿಯಲ್ಲಿ ಒಳ ಮೀಸಲಾತಿ ಕಲ್ಪಿಸಲು ನಡೆಯುತ್ತಿರುವ ಸಮೀಕ್ಷೆಯಲ್ಲಿ ಈವರೆಗೂ ಮಾಹಿತಿ ನೀಡದ ಪರಿಶಿಷ್ಟ ಕುಟುಂಬದವರು ನಾಗರಿಕ ಸೇವಾ ಕೇಂದ್ರಗಳಿಗೆ ತೆರಳಿ ಜೂನ್ 9ರಿಂದ ಜೂನ್ 22ರವರೆಗೆ ಮಾಹಿತಿ ನೀಡಬಹುದು ಎಂದು ನಿವೃತ್ತ ನ್ಯಾಯಮೂರ್ತಿ ಎಚ್.ಎನ್. ನಾಗಮೋಹನ ದಾಸ್ ನೇತೃತ್ವದ ಏಕ ಸದಸ್ಯ ಆಯೋಗ ತಿಳಿಸಿದೆ.
ಕರ್ನಾಟಕ ಒನ್, ಬೆಂಗಳೂರು ಒನ್, ಗ್ರಾಮ ಒನ್ ಕೇಂದ್ರಗಳು ಮತ್ತು ಬಾಪೂಜಿ ಸೇವಾ ಕೇಂದ್ರಗಳಲ್ಲಿಯೂ ಸಮೀಕ್ಷೆಗೆ ಅವಕಾಶ ಕಲ್ಪಿಸಲಾಗುವುದು. ಅಲ್ಲದೆ, ಸಮೀಕ್ಷೆಯ ಉದ್ದೇಶದಿಂದ ಬಿಬಿಎಂಪಿ ವ್ಯಾಪ್ತಿಯ 198 ವಾರ್ಡ್ ಕಚೇರಿಗಳಲ್ಲಿಯೂ ಪ್ರತ್ಯೇಕ ಶಿಬಿರದ ವ್ಯವಸ್ಥೆ ಮಾಡಲಾಗಿದೆ. ಆನ್ಲೈನ್ https://schedulecastesurvey.karnataka.gov.in/selfdeclaration ಲಿಂಕ್ ಮೂಲಕ ಸ್ವಯಂ ಘೋಷಣೆ ಮಾಡಿಕೊಳ್ಳುವ ಅವಧಿಯನ್ನು ಜೂನ್ 22ರವರೆಗೆ ವಿಸ್ತರಿಸಲಾಗಿದೆ ಎಂದು ಆಯೋಗ ತಿಳಿಸಿದೆ.

