ಮಂಡ್ಯ: ನರೇಗಾ ಯೋಜನೆಯಡಿ ಕೆರೆ ಹೂಳೆತ್ತುವ ಕಾರ್ಯದಲ್ಲಿ ನಿರತರಾಗಿದ್ದ ಮಹಿಳಾ ಕೂಲಿ ಕಾರ್ಮಿಕರು ಶೌಚಕ್ಕೆ ತೆರಳಿದ ದೃಶ್ಯಗಳನ್ನು ಡ್ರೋನ್ ಬಳಸಿ ಸೆರೆ ಹಿಡಿದು ಕಿಡಿಗೇಡಿಗಳು ವಿಕೃತಿ ಮೆರೆದಿದ್ದಾರೆ.
ಮಂಡ್ಯ ಜಿಲ್ಲೆ ಕೆಆರ್ ಪೇಟೆ ತಾಲೂಕಿನ ಮಂದಗೆರೆ ಸಮೀಪ ಘಟನೆ ನಡೆದಿದ್ದು, ಆರೋಪಿಗಳ ವಿರುದ್ಧ ಕಾನೂನು ಕ್ರಮಕ್ಕೆ ಒತ್ತಾಯಿಸಿ ಸ್ಥಳದಲ್ಲೇ ಮಹಿಳೆಯರು ಪ್ರತಿಭಟನೆ ನಡೆಸಿದ್ದಾರೆ. ಡ್ರೋನ್ ಬಳಸಿ ಶೌಚ ದೃಶ್ಯವನ್ನು ಸೆರೆಹಿಡಿದವರು ಕಾರ್, ಬೈಕ್ ಗಳಲ್ಲಿ ಪರಾರಿಯಾಗಿದ್ದು, ಅವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ನೂರಾರು ನರೇಗಾ ಕೂಲಿ ಕಾರ್ಮಿಕ ಮಹಿಳೆಯರು ಸ್ಥಳದಲ್ಲೇ ಪ್ರತಿಭಟನೆ ನಡೆಸಿದ್ದಾರೆ.
ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೇವಿನಹಳ್ಳಿ ಅಮಾನಿಕೆರೆ ಹೂಳೆತ್ತುವ ಕಾರ್ಯ ಕೈಗೊಳ್ಳಲಾಗಿದ್ದು, ಸುತ್ತಲಿನ ವಿವಿಧ ಗ್ರಾಮಗಳ 100ಕ್ಕೂ ಅಧಿಕ ಮಹಿಳೆಯರು ಹೊಳೆತ್ತುವ ಕಾರ್ಯದಲ್ಲಿ ತೊಡಗಿದ್ದರು. ಕಾಮಗಾರಿಯ ವೇಳೆ ಕೆಲವು ಮಹಿಳಾ ಕಾರ್ಮಿಕರು ಶೌಚಕ್ಕೆ ತೆರಳಿದಾಗ ವಿಕೃತ ಮನಸ್ಸಿನ ಕಿಡಿಗೇಡಿಗಳು ಕೆರೆ ಏರಿ ಮೇಲೆ ನಿಂತು ಡ್ರೋನ್ ಕ್ಯಾಮರಾ ಬಳಸಿ ಚಿತ್ರೀಕರಣ ಮಾಡಿದ್ದಾರೆ. ಶೌಚಕ್ಕೆ ತೆರಳಿದ ವೇಳೆ ಡ್ರೋನ್ ಹಾರಾಡುತ್ತಿರುವುದನ್ನು ಕಂಡ ಕೂಲಿ ಕಾರ್ಮಿಕ ಮಹಿಳೆಯರು ಕೂಗಿಕೊಂಡು ಬರುವಷ್ಟರಲ್ಲಿ ಕಿಡಿಗೇಡಿಗಳು ಪರಾರಿಯಾಗಿದ್ದಾರೆ. ಇದನ್ನು ವಿರೋಧಿಸಿ ಸ್ಥಳದಲ್ಲೇ ಮಹಿಳೆಯರು ಪ್ರತಿಭಟನೆ ನಡೆಸಿದ್ದು, ಕಿಡಿಗೇಡಿಗಳ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದ್ದಾರೆ.