ಬೆಂಗಳೂರು: ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಮಳೆ ಮುಂದುವರೆದಿದ್ದು, 30 ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗುವ ಸಂಭವ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆ ಹೊರತುಪಡಿಸಿ ಉಳಿದ ಜಿಲ್ಲೆಗಳಲ್ಲಿ ಬುಧವಾರ ಭಾರೀ ಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದೆ. ಕೆಲವು ಕಡೆಗಳಲ್ಲಿ ಗುಡುಗು ಸಹಿತ ಧಾರಾಕಾರ ಮಳೆಯಾಗುವ ಸಂಭವ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಭಾರಿ ಗಾಳಿ ಮುನ್ಸೂಚನೆ ನೀಡಿದ ಜಿಲ್ಲೆಗಳಲ್ಲಿ ಹಲವು ಕಡೆ ಗಂಟೆಗೆ 40 ರಿಂದ 50 ಕಿಲೋಮೀಟರ್ ವೇಗದ ಗಾಳಿ ಬೀಸಬಹುದು. ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಗಂಟೆಗೆ 35 ರಿಂದ 45 ಕಿ.ಮೀ ವೇಗದಲ್ಲಿ ಗಾಳಿ ಬೀಸಬಹುದು ಮತ್ತು ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದಲ್ಲಿ ಬುಧವಾರದಿಂದ ಮತ್ತೆ ಮುಂಗಾರು ಚುರುಕುಗೊಳ್ಳಲಿದ್ದು, ವಿವಿಧೆಡೆ ಭಾರಿ ಮಳೆ ಆಗಲಿದೆ. ಜುಲೈ 2ರಂದು ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಸೇರಿ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಗುರುವಾರ, ಶುಕ್ರವಾರದಿಂದ ಉತ್ತರ ಒಳನಾಡು ಮತ್ತು ಕರಾವಳಿಯ ಜಿಲ್ಲೆಗಳಲ್ಲಿ ಮಳೆ ವ್ಯಾಪಿಸಲಿದೆ ಎಂದು ಹೇಳಲಾಗಿದೆ.