ಚಿಕ್ಕಬಳ್ಳಾಪುರ: ಸರ್ಕಾರದಲ್ಲಿ ಅಧಿಕಾರ ಬದಲಾವಣೆ ಬಗ್ಗೆ ಬಿಜೆಪಿ ಹಗಲುಗನಸು ಕಾಣುತ್ತಿದೆ. ಸುಳ್ಳು ಹೇಳುವುದರಲ್ಲಿ ನಿಸ್ಸೀಮರಾಗಿರುವ ಬಿಜೆಪಿಯವರಿಗೆ ಸತ್ಯ ಹೇಳಿ ಗೊತ್ತೇ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಚಿಕ್ಕಬಳ್ಳಾಪುರದ ನಂದಿಬೆಟ್ಟದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಬಿಜೆಪಿಯವರು ನಂಬುತ್ತಾರೋ ಬಿಡುತ್ತಾರೋ ನಾವೆಲ್ಲಾ ಒಟ್ಟಾಗಿದ್ದೇವೆ. ನಮ್ಮ ಸರ್ಕಾರ ಬಂಡೆಯಂತೆ ಐದು ವರ್ಷ ಆಡಳಿತ ನಡೆಸಲಿದೆ ಎಂದು ಸ್ಪಷ್ಟಪಡಿಸಿದರು.
ಬಿಜೆಪಿ ಅಧಿಕಾರದಲ್ಲಿದ್ದಾಗ ಏನು ಸಾಕ್ಷಿಗುಡ್ಡೆಯನ್ನು ಬಿಟ್ಟುಹೋಗಿದ್ದಾರೆ? ನೀರಾವರಿ, ಗ್ರಾಮೀಣಾಭಿವೃದ್ಧಿ, ಲೋಕೋಪಯೋಗಿ, ಶಿಕ್ಷಣ, ಆರೋಗ್ಯ ಕ್ಷೇತ್ರಗಳಲ್ಲಿ ಏನು ಮಾಡಿದ್ದಾರೆ. ಬಿಜೆಪಿ ನಾಲ್ಕು ವರ್ಷ ಅಧಿಕಾರದಲ್ಲಿತ್ತು. ಎಚ್ ಡಿ ಕುಮಾರಸ್ವಾಮಿಯವರು ಒಂದು ವರ್ಷ ಎರಡು ತಿಂಗಳು ಸಮ್ಮಿಶ್ರ ಸರ್ಕಾರದಲ್ಲಿ ಅಧಿಕಾರದಲ್ಲಿದ್ದರು. ಏನು ಮಾಡಿದ್ದಾರೆ ಎಂದು ಪ್ರಶ್ನಿಸಿದರು.
ಏನೂ ಮಾಡದೇ ಸುಳ್ಳು ಹೇಳಿಕೊಂಡು ಜನರನ್ನು ತಪ್ಪುದಾರಿಗೆ ಎಳೆಯುವ ಪ್ರಯತ್ನ ಮಾಡುತ್ತಿದ್ದಾರೆ. 2 ವರ್ಷದ ಸರ್ಕಾರದ ಸಾಧನಾ ಸಮಾವೇಶದಲ್ಲಿ ಮಳೆಯಿದ್ದರೂ ಸುಮಾರು ಮೂರು ಲಕ್ಷಕ್ಕಿಂತ ಹೆಚ್ಚು ಜನ ಸೇರಿದ್ದರು. ಜನರು ಸರ್ಕಾರದ ಪರವಾಗಿ ಸುಮ್ಮನೆ ಬರುತ್ತಾರೆಯೇ ಎಂದು ಪ್ರಶ್ನಿಸಿದರು.
ನಾನೇ ಐದು ವರ್ಷ ಮುಖ್ಯಮಂತ್ರಿಯಾಗಿ ಮುಂದುವರೆಯಲಿದ್ದೇನೆ. ಯಾವುದೇ ಅನುಮಾನವಿಲ್ಲ. ಆರ್.ಅಶೋಕ್, ವಿಜಯೇಂದ್ರ, ಛಲವಾದಿ ನಾರಾಯಣಸ್ವಾಮಿ ಹೇಳಿದೆಲ್ಲಾ ಸತ್ಯವಲ್ಲ ಎಂದರು.
ಇನ್ನು ರಾಜ್ಯದ ಎಲ್ಲಾ ಕಂದಾಯ ವಿಭಾಗಗಳಲ್ಲಿ ಸಚಿವ ಸಂಪುಟ ಸಭೆ ನಡೆಸಬೇಕೆಂದು ತೀರ್ಮಾನಿಸಿ ಗುಲ್ಬರ್ಗಾ, ಮೈಸೂರು, ಬೆಂಗಳೂರು ವಿಭಾಗಗಳಲ್ಲಿ ಸಚಿವ ಸಂಪುಟ ಸಭೆ ನಡೆದಿದ್ದು, ಇನ್ನು ಕೆಲವೇ ದಿನಗಳಲ್ಲಿ ಬೆಳಗಾವಿ ಹಾಗೂ ವಿಜಯಪುರದಲ್ಲಿ ಕೂಡ ಸಂಪುಟ ಸಭೆ ನಡೆಸಲಾಗುವುದು ಎಂದರು.
ರಾಜ್ಯದಲ್ಲಿ ಒಳ್ಳೆ ಮಳೆ ಬೆಳೆಯಾಗಿ , ಸಮೃದ್ಧಿಯಾಗಿ ಜನ ಸಂತೋಷದಿಂದಿರಲಿ ಮಾನವೀಯ ಸಮಾಜ ನಿರ್ಮಾಣವಾಗುತ್ತ ಪ್ರಯತ್ನ ಮಾಡಲಿ ಎಂಬುದು ನಮ್ಮ ಆಶಯ ಎಂದರು.