ಬೆಂಗಳೂರು: ವೇದಿಕೆ ಮೇಲೆಯೇ ಹೊಡೆಯುವಂತೆ ಕೈ ಎತ್ತಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಡೆಗೆ ಅವಮಾನಗೊಂಡು ಸ್ವಯಂ ನಿವೃತ್ತಿಗೆ ಧಾರವಾಡ ಎ ಎಸ್ ಪಿ ನಾರಾಯಣ ಭರಮನಿ ಮುಂದಾಗಿದ್ದಾರೆ ಎನ್ನಲಾಗಿದೆ. ಈ ವಿಚಾರವಾಗಿ ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿರುವ ವಿಪಕ್ಷ ನಾಯಕ ಆರ್.ಅಶೋಕ್, ಕಾಂಗ್ರೆಸ್ ಸರ್ಕಾರ ಪೊಲೀಸರ ನೈತಿಕ ಸ್ಥೈರ್ಯ ಕುಸಿಯುವಂತೆ ಮಾಡುತ್ತಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಕಾಂಗ್ರೆಸ್ ಸರ್ಕಾರದಿಂದ ಪೊಲೀಸ್ ಇಲಾಖೆ ಮನೋಬಲಕ್ಕೆ ಧಕ್ಕೆಯಾಗಿದೆ. ಸಿಎಂ ಸಿದ್ದರಾಮಯ್ಯ ಅವರೇ ಹೆಚ್ಚುವರಿ ಎಸ್ ಪಿ ನಾರಾಯಣ ಭರಮನಿ ಅವರ ಮೇಲೆ ನೀವು ಬಹಿರಂಗ ವೇದಿಕೆ ಮ್ರೇಲೆ ಕೈ ಎತ್ತಿದ ಘಟನೆಗೆ ಕಾರಣ ನಿಮ್ಮ ಅಧಿಕಾರದ ದರ್ಪವೋ, ಮದವೋ, ದುರಹಂಕಾರವೋ? ಅಥವಾ ವಿಫಲ ಸರ್ಕಾರ ಮುನ್ನಡೆಸುತ್ತಿರುವ ಹತಾಶೆಯೋ? ಎಂದು ಪ್ರಶ್ನಿಸಿದ್ದಾರೆ.
ಇಷ್ಟರಲ್ಲೇ ಅಧಿಕಾರ ಬಿಟ್ಟುಕೊಡಬೇಕು ಎನ್ನುವ ಕಾಕತಾಳೀಯವೋ? ಅದನ್ನು ನಿಮ್ಮ ಆತ್ಮಾವಲೋಕನಕ್ಕೆ ಬಿಡುತ್ತೇನೆ. ಆದರೆ ನಿಮ್ಮ ನಡೆಯಿಂದ ಒಬ್ಬ ಕರ್ತವ್ಯ ನಿಷ್ಠ ಅಧಿಕಾರಿಯ ಸ್ವಾಭಿಮಾನಕ್ಕೆ ಧಕ್ಕೆ ಬಂದಿದೆ. ಇಡೀ ಪೊಲೀಸ್ ಇಲಾಖೆಯ ಮನೋಬಲಕ್ಕೆ ಚ್ಯುತಿಬಂದಿದೆ. ನೌಕರಶಾಹಿಯ ಆತ್ಮಸ್ಥೈರ್ಯ ಕುಸಿದಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.