ಬೆಂಗಳೂರು: ಜಾತ್ರೆಯಲ್ಲಿ ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಪುತ್ರ ಸಂತೋಷ್ ಜಾರಕಿಹೊಳಿ ಬಂದೂಕಿನಿಂದ ಗಾಳಿಯಲ್ಲಿ ಗುಂಡು ಹಾರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವರು, ರಮೇಶ್ ಜಾರಕಿಹೊಳಿ ಪುತ್ರನ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಈಗಾಗಲೇ ಸ್ಥಳೀಯ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ. ಕಾನೂನು ರೀತಿ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು. ಪೊಲೀಸರು ಅವರ ಕೆಲಸ ಮಾಡುತ್ತಾರೆ. ಯಾವುದೇ ಪ್ರಭಾವಕ್ಕೂ ಒಳಗಾಗಲ್ಲ. ಯಾರೇ ಆಗಲಿ ಕಾನೂನಿಗಿಂತ ದೊಡ್ಡವರಿಲ್ಲ. ಈ ಬಗ್ಗೆ ಪಾರದರ್ಶಕವಾಗಿ ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದರು.
ರಮೇಶ್ ಜಾರಕಿಹೊಳಿ ಪುತ್ರ ಸಂತೋಷ್ ಜಾರಕಿಹೊಳಿಮ್ ಗೋಕಾಕ್ ಲಕ್ಷ್ಮೀ ದೇವಿ ಜಾತ್ರಾ ಮಹೋತ್ಸವದಲ್ಲಿ ಸಾರ್ವಜನಿಕರ ಮಧ್ಯೆ ನಿಂತು ಬಂದೂಕು ಹಿಡಿದು ಗಾಳಿಯಲ್ಲಿ ಗುಂಡು ಹಾರಿಸಿ ಸಂಭ್ರಮಿಸಿದ್ದರು. ಈ ಹಿನ್ನೆಲೆಯಲ್ಲಿ ಅವರ ವಿರುದ್ಧ ಪ್ರಕರಣ ದಾಖಲಾಗಿದೆ.