ಬೆಂಗಳೂರು : ಯುವ ವಯಸ್ಸಿನವರು ಹೃದಯಾಘಾತದಿಂದ ಸಾವನ್ನಪ್ಪುತ್ತಿರುವ ಹಿನ್ನೆಲೆ ರಾಜ್ಯಾದ್ಯಂತ ಶಾಲಾ ಮಕ್ಕಳಿಗೆ ‘ಹೃದಯ ತಪಾಸಣೆ’ ನಡೆಸಲು ಯೋಜನೆ ರೂಪಿಸಲಾಗಿದೆ ಎಂದು ಸಚಿವ ಕೆ ಎನ್ ರಾಜಣ್ಣ ತಿಳಿಸಿದ್ದಾರೆ.
ಹೌದು. ಪ್ರತಿ ವರ್ಷ ರಾಜ್ಯಾದ್ಯಂತ ಶಾಲಾ ಹಂತದಲ್ಲೇ ಮಕ್ಕಳ ಹೃದಯದ ಆರೋಗ್ಯ ತಪಾಸಣೆಗೆ ಯೋಜನೆ ರೂಪಿಸಿದ್ದು, ಮುಂದಿನ ದಿನಗಳಲ್ಲಿ ಕಾಲೇಜು ಹಂತಕ್ಕೂ ವಿಸ್ತರಿಸಲಾಗುವುದು ಎಂದು ಸಚಿವ ಕೆ.ಎನ್. ರಾಜಣ್ಣ ತಿಳಿಸಿದರು.
ಹೃದಯಾಘಾತ ಪ್ರಕರಣಗಳನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು ಎಲ್ಲ ಆಸ್ಪತ್ರೆಗಳಲ್ಲಿಯೂ ಹೃದಯಾಘಾತಕ್ಕೆ ಕಾರಣ ಹಾಗೂ ಮುಂಜಾಗ್ರತಾ ಕ್ರಮಗಳ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸುವ ಕ್ರಮಗಳನ್ನು ಕೈಗೊಂಡು ಜಾಗೃತಿ ಮೂಡಿಸಲು ಜಿಲ್ಲಾಡಳಿತಕ್ಕೆ ಸೂಚನೆ ನೀಡಲಾಗಿದೆ ಎಂದರು.
ಹೃದಯಾಘಾತಕ್ಕೆ ಆಹಾರ ಪದ್ದತಿ ಬದಲಾವಣೆ, ಬದಲಾದ ಜೀವನ ಶೈಲಿ, ವಂಶ ಪಾರ್ಯ೦ಪಾರ್ಯ ಸೇರಿ ಹಲವು ಕಾರಣಗಳಿವೆ. ಆದರೆ, ಹೃದಯಾಘಾತದಿಂದ ವ್ಯಕ್ತಿ ಸಾವನ್ನಪ್ಪಿರುವ ಬಗ್ಗೆ ಖಚಿತ ಮಾಹಿತಿ ಪಡೆಯಲು ಮೃತಪಟ್ಟ ಕುಟುಂಬದವರ ಮನ ಒಲಿಸಿ ಕಡ್ಡಾಯವಾಗಿ ಮರಣೋತ್ತರ ಪರೀಕ್ಷೆ ಮಾಡಬೇಕು ಎಂದು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಹಾಸನ ಜಿಲ್ಲೆಯಲ್ಲಿ ನಡೆದ ಹೃದಯಾಘಾತ ಪ್ರಕರಣಗಳ ಬಗ್ಗೆ ತನಿಖೆ ಹಾಗೂ ಮಾಹಿತಿ ಪಡೆಯಲು ಈಗಾಗಲೇ ಹೃದ್ರೋಗ ತಜ್ಞರ ತಂಡ ರಚಿಸಿದ್ದು ವರದಿ ಬಳಿಕ ಮುಂದಿನ ಕ್ರಮದ ಬಗ್ಗೆ ಸರ್ಕಾರ ತೀರ್ಮಾನ ಕೈಗೊಳ್ಳಲಿದೆ ಎಂದರು.