ಬೆಂಗಳೂರು: ಮಲೆಮಹದೇಶ್ವರ ಬೆಟ್ಟದಲ್ಲಿ ಹುಲಿಗಳ ಸಂಖ್ಯೆ ಅಧಿಕವಾಗಿರುವ ಹಿನ್ನೆಲೆಯಲ್ಲಿ ಈ ಪ್ರದೇಶವನ್ನು ಹುಲಿ ಸಂರಕ್ಷಿತ ಪ್ರದೇಶವಾಗಿ ಘೋಷಣೆ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಈ ಬಗ್ಗೆ ಸ್ಥಳೀಯರ ಅಭಿಪ್ರಾಯ ಸಂಗ್ರಹಿಸಲು ಸರ್ಕಾರ ಮುಂದಾಗಿದೆ.
ವಿಕಾಸಸೌಧದ ಕಚೇರಿಯಲ್ಲಿ ಮಂಗಳವಾರ ಅರಣ್ಯ ಪಡೆ ಮುಖ್ಯಸ್ಥರು, ಮುಖ್ಯ ವನ್ಯಜೀವಿ ಪರಿಪಾಲಕರ ಸಭೆ ನಡೆಸಿರುವ ಅರಣ್ಯ ಸಚಿವ ಈಶ್ವರ್ ಖಂಡ್ರೆ ಹುಲಿ ಸಂರಕ್ಷಿತ ಪ್ರದೇಶ ಘೋಷಣೆಗೆ ಸಂಬಂಧಿಸಿದಂತೆ ಸ್ಥಳೀಯರ ಅಭಿಪ್ರಾಯ ಸಂಗ್ರಹಿಸಬೇಕು ಎಂದು ನಿರ್ದೇಶನ ನೀಡಿದ್ದಾರೆ.
ಚಾಮರಾಜನಗರ, ಮೈಸೂರು ಜಿಲ್ಲೆಗಳ ವ್ಯಾಪ್ತಿಯಲ್ಲಿ ಬಂಡಿಪುರ, ನಾಗರಹೊಳೆ ಹುಲಿ ಸಂರಕ್ಷಿತ ಅರಣ್ಯಗಳಿವೆ. ಮಲೆ ಮಹದೇಶ್ವರ ಬೆಟ್ಟದಲ್ಲಿ ಕೆಲವು ದಿನಗಳ ಹಿಂದೆ ಹೆಣ್ಣು ಹುಲಿ ಹಾಗೂ ನಾಲ್ಕು ಮರಿ ಹುಲಿಗಳ ಹತ್ಯೆ ನಡೆದಿತ್ತು. ಹುಲಿ ದಾಳಿಯಿಂದ ಬೇಸತ್ತು ಸ್ಥಳೀಯರು ವಿಷಪ್ರಾಶನದ ಮೂಲಕ ಈ ಕೃತ್ಯ ಎಸಗಿದ್ದರು. ಇಂತಹ ಕೃತ್ಯಗಳನ್ನು ತಡೆಯಲು ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲು ಆಯಾ ವಲಯದ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಹೊಣೆಗಾರಿಕೆ ನಿಗದಿಪಡಿಸುವಂತೆ ಸಚಿವರು ಸೂಚನೆ ನೀಡಿದ್ದಾರೆ.
ತಮಿಳುನಾಡಿನಿಂದ ಸಾವಿರಾರು ಹಸು, ಎಮ್ಮೆಗಳನ್ನು ಮೇವಿಗಾಗಿ ಮಲೆ ಮಹದೇಶ್ವರ ಬೆಟ್ಟ ವನ್ಯಜೀವಿಧಾಮ ಅರಣ್ಯ ಪ್ರದೇಶಕ್ಕೆ ಕರೆತರಲಾಗುತ್ತದೆ. ಇದೊಂದು ಉದ್ಯಮವಾಗಿ ಮಾರ್ಪಟ್ಟಿದ್ದು, ಸ್ಥಳೀಯ ಜಾನುವಾರುಗಳನ್ನು ಮೇಯಿಸಲು ಪರವಾನಿಗೆ ನೀಡಿ ಹೊರ ರಾಜ್ಯದ ಜಾನುವಾರುಗಳನ್ನು ನಿಷೇಧಿಸಲು ಕ್ರಮ ಕೈಗೊಳ್ಳುವಂತೆ ಸಚಿವರು ಸೂಚಿಸಿದ್ದಾರೆ.
ವನ್ಯಜೀವಿಗಳ ಕಳ್ಳ ಬೇಟೆ, ಅರಣ್ಯ ಒತ್ತುವರಿ, ಮರಗಳ ಅಕ್ರಮ ಕಡಿತಲೆ ಸೇರಿ ಅರಣ್ಯ ಮತ್ತು ವನ್ಯಜೀವಿಗಳಿಗೆ ತೊಂದರೆಯಾಗುವುದನ್ನು ತಡೆಯಲು ಕೃತಕ ಬುದ್ಧಿಮತ್ತೆ, ಡ್ರೋನ್ ಕ್ಯಾಮರಾ ಬಳಕೆ, ಸಿಸಿ ಕ್ಯಾಮೆರಾ ಅಳವಡಿಸುವ ಬಗ್ಗೆ ಕ್ರಮ ಕೈಗೊಳ್ಳಬೇಕು. ದೃಶ್ಯಗಳ ಆಧರಿಸಿ ಅಕ್ರಮ ಎಸಗುವವರ ಮೇಲೆ ಕ್ರಮ ಜರುಗಿಸಬೇಕು ಎಂದು ಹೇಳಿದ್ದಾರೆ.