ಬೆಂಗಳೂರು: ಬೆಂಗಳೂರಿನಲ್ಲಿ ನಕ್ಷೆ ಉಲ್ಲಂಘಿಸಿ ಅನಧಿಕೃತ ಕಟ್ಟಡ ನಿರ್ಮಿಸುವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಹಾಗೂ ಅನಧಿಕೃತ ಕಟ್ಟಡಗಳ ತೆರವು ಕಾರ್ಯಾಚರಣೆ ತೀವ್ರಗೊಳಿಸುವಂತೆ ಬಿಬಿಎಂಪಿ ಮುಖ್ಯ ಆಯುಕ್ತ ಮಹೇಶ್ವರರಾವ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಅಧಿಕಾರಿಗಳ ಸಭೆ ನಡೆಸಿದ ಮುಖ್ಯ ಆಯುಕ್ತರು, ನಗರದಲ್ಲಿ ಅನಧಿಕೃತ ಕಟ್ಟಡ ತೆರವು ಜತೆಗೆ ಬೆಸ್ಕಾಂಗೆ ಪತ್ರ ಬರೆದು ವಿದ್ಯುತ್ ಸಂಪರ್ಕ ಕಡಿತಗೊಳಿಸಿ, ಕಾನೂನು ಕ್ರಮ ಕೈಗೊಳ್ಳುವಂತೆ ನಿರ್ದೇಶಿಸಿದ್ದಾರೆ.
ಬೆಂಗಳೂರಿನಲ್ಲಿ ರಸ್ತೆ ಆಗಲೀಕರಣ, ಮೇಲ್ಸೇತುವೆ, ಕೆಳಸೇತುವೆ ನಿರ್ಮಾಣ ಸೇರಿ ಇತರೆ ಯೋಜನೆಗಳಿಗೆ ಟಿಡಿಆರ್ ನೀಡಿ ಭೂಸ್ವಾಧೀನ ಮಾಡಿಕೊಳ್ಳಲು ಆಯಾ ವಲಯಗಳಲ್ಲಿ ಸೂಕ್ತ ಕ್ರಮ ಕೈಗೊಳ್ಳಬೇಕು.
ಬಿಬಿಎಂಪಿಯ ಎಲ್ಲಾ ಎಂಟು ವಲಯಗಳಲ್ಲಿ 20 ಕಿಲೋಮೀಟರ್ ಪಾದಚಾರಿ ಮಾರ್ಗ ಗುರುತಿಸಿ ಅವುಗಳಲ್ಲಿನ ಸಮಸ್ಯೆಗಳ ನಿವಾರಿಸಬೇಕು. ಪಾದಚಾರಿ ಮಾರ್ಗಗಳ ಒತ್ತುವರಿ ತೆರವುಗೊಳಿಸಿ ಅಭಿವೃದ್ಧಿಪಡಿಸಬೇಕು. ಸ್ವಚ್ಛತಾ ಕಾರ್ಯ ಹಮ್ಮಿಕೊಳ್ಳಬೇಕೆಂದು ಸೂಚನೆ ನೀಡಿದ್ದಾರೆ.