ಬೆಂಗಳೂರು : ದೇವನಹಳ್ಳಿ ಭೂಸ್ವಾಧೀನ ಪ್ರಕ್ರಿಯೆಯನ್ನು ಸಂಪೂರ್ಣವಾಗಿ ಕೈಬಿಡಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ವಿಧಾನಸೌಧದ ಸಭಾಂಗಣದಲ್ಲಿ ದೇವನಹಳ್ಳಿ ತಾಲೂಕು ಚನ್ನರಾಯಪಟ್ಟಣ ಹಾಗೂ ಇತರ ಗ್ರಾಮಗಳಲ್ಲಿನ ಭೂಸ್ವಾಧೀನ ಪ್ರಕ್ರಿಯೆಗೆ ಸಂಬಂಧಪಟ್ಟಂತೆ ಅಧಿಕಾರಿಗಳು ಹಾಗೂ ರೈತ ಮುಖಂಡರ ಸಭೆ ನಡೆಯಿತು.
ಈ ಸಂದರ್ಭದಲ್ಲಿ ಸಿಎಂ ಮಾತನಾಡಿದರು.
- ದೇವನಹಳ್ಳಿ ತಾಲೂಕು ಚನ್ನರಾಯಪಟ್ಟಣ ಹಾಗೂ ಇತರ ಗ್ರಾಮಗಳಲ್ಲಿನ ಭೂಸ್ವಾಧೀನ ಪ್ರಕ್ರಿಯೆಯನ್ನು ಸಂಪೂರ್ಣವಾಗಿ ಕೈಬಿಟ್ಟಿದ್ದೇವೆ.
- ಸರ್ಕಾರ ಭೂಸ್ವಾಧೀನ ಪ್ರಕ್ರಿಯೆಯನ್ನು ಸಂಪೂರ್ಣವಾಗಿ ಕೈಬಿಡಲು ನಿರ್ಧರಿಸಿದೆ. ಕೆಲವು ರೈತರು ಜಮೀನು ನೀಡಲು ಸಿದ್ಧರಿರುವುದಾಗಿ ಮುಂದೆ ಬಂದಿದ್ದಾರೆ. ಜಮೀನು ನೀಡಲು ಇಚ್ಚಿಸುವವರ ಜಮೀನು ಸರ್ಕಾರ ಸ್ವಾಧೀನಪಡಿಸಿಕೊಳ್ಳಲಿದ್ದು, ಅವರಿಗೆ ಹೆಚ್ಚಿನ ಪರಿಹಾರ ಮತ್ತು ಅಭಿವೃದ್ಧಿಪಡಿಸಿದ ಜಮೀನು ನೀಡಲಾಗುವುದು.
- ಅಂತಹ ರೈತರಿಗೆ ಮಾರ್ಗಸೂಚಿ ದರಕ್ಕಿಂತ ಹೆಚ್ಚುವರಿ ದರವನ್ನು ನೀಡಲಿದೆ. ಅಲ್ಲಿ ಕೃಷಿ ಚಟುವಟಿಕೆಗಳನ್ನು ಮುಂದುವರೆಸಲು ಬಯಸುವ ರೈತರು ಕೃಷಿ ಚಟುವಟಿಕೆಗಳನ್ನು ಮುಂದುವರೆಸಿಕೊಂಡು ಹೋಗಬಹುದಾಗಿದೆ.
- ದೇವನಹಳ್ಳಿ ತಾಲೂಕು ಬೆಂಗಳೂರಿಗೆ ಹತ್ತಿರದ್ದಲ್ಲಿದ್ದು, ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಅಲ್ಲಿಯೇ ಇದೆ. ರಾಜ್ಯದ ಪ್ರತಿಯೊಬ್ಬರ ವರಮಾನ ಹೆಚ್ಚಳವಾಗಬೇಕಿದ್ದರೆ ಅಭಿವೃದ್ದಿ ಕಾರ್ಯ ನಡೆಯಬೇಕಾಗಿದೆ. ಹೊಸ ಕೈಗಾರಿಕೆಗಳ ಪ್ರಾರಂಭಕ್ಕೆ, ಬಂಡವಾಳ ಹೂಡಿಕೆಗೆ ಜಮೀನಿನ ಅಗತ್ಯವಿದೆ. ಜಮೀನು ಸ್ವಾಧೀನಪಡಿಸಿ ಕೈಗಾರಿಕೆಗಳನ್ನು ಪ್ರಾರಂಭಿಸಲು ಸರ್ಕಾರ ನೀಡಬೇಕಾಗುತ್ತದೆ.
- 1777 ಎಕ್ರೆ ಜಮೀನು ದೇವನಹಳ್ಳಿ ತಾಲೂಕಿನಲ್ಲಿ ಸ್ವಾಧೀನಪಡಿಸಿಕೊಂಡು, ಅಲ್ಲಿ ಏರೋಸ್ಪೇಸ್ ಪ್ರಾರಂಭಿಸುವುದು ಸರ್ಕಾರದ ಉದ್ದೇಶ. ಬೆಂಗಳೂರಿನ ಸಮೀಪದಲ್ಲಿ ಇದಕ್ಕೆ ಜಮೀನು ಒದಗಿಸಲು ಕೋರಿಕೆ ಸ್ವೀಕರಿಸಲಾಗಿತ್ತು.
- ರಾಜ್ಯದಲ್ಲಿ ಭೂಸ್ವಾಧೀನ ವಿರುದ್ಧ ಈ ಮಟ್ಟದ ಪ್ರತಿಭಟನೆ ನಡೆದಿಲ್ಲ. ಅದು ಫಲವತ್ತಾದ ವ್ಯವಸಾಯಕ್ಕೆ ಯೋಗ್ಯವಾದ ಭೂಮಿ. ಅಲ್ಲಿನ ರೈತರು ಆ ಜಮೀನಿನ ಮೇಲೆ ಹೆಚ್ಚು ಅವಲಂಬಿತರಾಗಿದ್ದಾರೆ. ಆದ್ದರಿಂದ ಭೂಸ್ವಾಧೀನ ಪ್ರಕ್ರಿಯೆ ಕೈಬಿಡಬೇಕೆಂದು ಹೋರಾಟಗಾರರು ಸ್ಪಷ್ಟಪಡಿಸಿದ್ದಾರೆ.
- ಸರ್ಕಾರ ರೈತರು, ಜಮೀನುದಾರರು ಸೇರಿದಂತೆ ಎಲ್ಲರ ಅಹವಾಲುಗಳನ್ನು ಆಲಿಸಿದೆ. ರಾಜ್ಯದ ಅಭಿವೃದ್ದಿಗೆ, ಬೆಳವಣಿಗೆಗೆ ಕೈಗಾರಿಕೆ ಉತ್ತೇಜನ ನೀಡುವುದು ಅಗತ್ಯವಿದೆ.
- ಯಾವುದೇ ಕಾರಣಕ್ಕೂ ಜಮೀನು ಸ್ವಾಧೀನ ಕೈಬಿಟ್ಟರೆ ಈ ಕೈಗಾರಿಕೆ ಬೇರೆ ಕಡೆ ಹೋಗುವ ಸಾಧ್ಯತೆ ಇದೆ. ಆದರೂ ಸರ್ಕಾರ ರೈತಪರವಾಗಿದ್ದು, ಅವರ ಬೇಡಿಕೆಗಳನ್ನು ಪರಿಗಣಿಸಿ ಭೂಸ್ವಾಧೀನ ಪ್ರಕ್ರಿಯೆಯನ್ನು ಕೈಬಿಡಲು ನಿರ್ಧರಿಸಿದೆ ಎಂದರು.
You Might Also Like
TAGGED:ಭೂಸ್ವಾಧೀನ