ಉತ್ತರ ಪ್ರದೇಶದ ಕಾನ್ಪುರದಲ್ಲಿನ ಚಕೇರಿ ಪ್ರದೇಶದಲ್ಲಿ ಹಗಲು ಹೊತ್ತಿನಲ್ಲಿ ಆಘಾತಕಾರಿ ಘಟನೆ ನಡೆದಿದೆ. ದ್ವಿಚಕ್ರ ವಾಹನದಲ್ಲಿ ಬಂದ ಮುಸುಕುಧಾರಿ ಯುವಕನೊಬ್ಬ 12ನೇ ತರಗತಿಯ 17 ವರ್ಷದ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಬುಧವಾರ ಮಧ್ಯಾಹ್ನ 3 ಗಂಟೆ ಸುಮಾರಿಗೆ ಯುವತಿ ಸ್ನೇಹಿತೆಯ ಮನೆಯಿಂದ ಪುಸ್ತಕಗಳನ್ನು ತೆಗೆದುಕೊಳ್ಳಲು ಹೋಗುತ್ತಿದ್ದಾಗ ಈ ಘಟನೆ ನಡೆದಿದೆ. ಆರೋಪಿ ಮೊದಲು ಅಸಭ್ಯವಾಗಿ ಕಾಮೆಂಟ್‌ಗಳನ್ನು ಮಾಡಿದ್ದು, ನಂತರ ಹಿಂತಿರುಗಿ ಬಂದು ಆಕೆಯ ಖಾಸಗಿ ಭಾಗಗಳನ್ನು ಸ್ಪರ್ಶಿಸಿ ಲೈಂಗಿಕ ದೌರ್ಜನ್ಯ ನಡೆಸಿದ್ದಾನೆ. ಈ ಆಕಸ್ಮಿಕ ದಾಳಿಯಿಂದಾಗಿ ಯುವತಿ ತಕ್ಷಣವೇ ಕೆಳಗೆ ಬೀಳುವಂತಾಗಿತ್ತು.
ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಯುವತಿಯ ದೂರಿನ ಆಧಾರದ ಮೇಲೆ ಎಫ್‌ಐಆರ್ ದಾಖಲಿಸಲಾಗಿದೆ. ಘಟನೆ ಕುರಿತು ಪ್ರತಿಕ್ರಿಯಿಸಿದ ಎಸಿಪಿ ಅಭಿಷೇಕ್ ಪಾಂಡೆ, ಆರೋಪಿಯನ್ನು ಪತ್ತೆಹಚ್ಚಲು ನಾಲ್ಕು ಪೊಲೀಸ್ ತಂಡಗಳನ್ನು ರಚಿಸಲಾಗಿದ್ದು, ಪ್ರಮುಖ ಸುಳಿವುಗಳು ಲಭ್ಯವಾಗಿವೆ. ಶೀಘ್ರದಲ್ಲೇ ಆರೋಪಿಯನ್ನು ಬಂಧಿಸಲಾಗುವುದು ಎಂದು ತಿಳಿಸಿದ್ದಾರೆ.
— POLICE COMMISSIONERATE KANPUR NAGAR (@kanpurnagarpol) July 17, 2025