ಮೈಸೂರು: ಡಿಜಿಟಲ್ ಪೇಮೆಂಟ್ ವಿಚಾರವಾಗಿ ರಾಜ್ಯದಲ್ಲಿ ಸಣ್ಣ ವ್ಯಾಪಾರಿಗಳಿಗೂ ವಾಣಿಜ್ಯ ತೆರಿಗೆ ನೋಟಿಸ್ ನೀಡಿರುವ ವಿಚಾರವಾಗಿ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಬಗ್ಗೆ ಚರ್ಚಿಸಿ ತೀರ್ಮಾನ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.
ಮೈಸೂರಿನ ಹೆಚ್.ಡಿ.ಕೋಟೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದರಾಮಯ್ಯ, ರಾಜ್ಯದ ಸಣ್ಣ ವ್ಯಾಪಾರಿಗಳಿಗೆ ಡಿಜಿಟಲ್ ಪೇಮೆಂಟ್ನಿಂದ ತೆರಿಗೆ ನೋಟೀಸ್ ನೀಡಲಾಗುತ್ತಿದೆ. ಈ ಬಗ್ಗೆ ಸಣ್ಣ ಅಂಗಡಿ ವ್ಯಾಪಾರಸ್ತರು ಆಕ್ರೋಶ ವ್ಯಕ್ತಪಡಿಸುತ್ತಿರುವ ವಿಚಾರವಾಗಿ, ಜಿಎಸ್ ಟಿ ಎಂಬುದನ್ನು ಕೇಂದ್ರ ಸರ್ಕಾರ ಮಾಡಿದ್ದು, ಜಿಎಸ್ ಟಿ ಕೌನ್ಸಿಲ್ ಕೇಂದ್ರ ಸರ್ಕಾರದ ಅಧೀನದಲ್ಲಿ ಬರುತ್ತದೆ. ಇದಕ್ಕೆ ರಾಜ್ಯ ಸರ್ಕಾರಗಳು ಜವಾಬ್ದಾರಿಯಿಲ್ಲ. ಆದಾಗ್ಯೂ ಈ ಬಗ್ಗೆ ಕೇಂದ್ರ ಸರ್ಕಾರದೊಂದಿಗೆ ಸಮಾಲೋಚನೆ ನಡೆಸಿ, ರಾಜ್ಯ ಸರ್ಕಾರದ ವಾಣಿಜ್ಯ ತೆರಿಗೆ ಇಲಾಖೆಯೊಂದಿಗೆ ಚರ್ಚಿಸಿ ಸೂಕ್ತ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಹೇಳಿದರು.
ಇನ್ನು ಸರ್ಕಾರದ ಸಾಧನಾ ಸಮಾವೇಶದ ಬಗ್ಗೆ ಬಿಜೆಪಿ ನಾಯಕರಿಂದ ಟೀಕೆ ವ್ಯಕ್ತವಾಗುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ, ಸರ್ಕಾರಕ್ಕೆ ಎರಡು ವರ್ಷತುಂಬಿದ ಸಂದರ್ಭದಲ್ಲಿ ವಿಜಯನಗರದಲ್ಲಿ ನಡೆದ ಸಮಾವೇಶದಲ್ಲಿ ಸುಮಾರು 2 ಲಕ್ಷ ಜನ ಭಾಗವಹಿಸಿದ್ದರು. ಇದು ಸರ್ಕಾರಕ್ಕೆ ಜನರ ಬೆಂಬಲವನ್ನು ಸೂಚಿಸುತ್ತದೆ. ಬಿಜೆಪಿಯವರು ಕೇವಲ ಸುಳ್ಳು ಹೇಳುತ್ತಿದ್ದಾರೆ. ನಮ್ಮ ಗ್ಯಾರಂಟಿ ಯೋಜನೆಗಳನ್ನು ಬಿಜೆಪಿಯವರು ಅನುಕರಿಸುತ್ತಿದ್ದಾರೆ. ನಮ್ಮ ಸರ್ಕಾರ ಗ್ಯಾರಂಟಿಗಳಿಗಾಗಿ 52 ಸಾವಿರ ಕೋಟಿ ರೂ.ಗಳನ್ನು ಖರ್ಚು ಮಾಡಿದೆ ಎಂದರು.