ಹುಬ್ಬಳ್ಳಿ: ಮುಖ್ಯಮಂತ್ರಿ ಸ್ಥಾನ ಒಲಿಯಲು ಗುರುಬಲ, ತಾರಾ ಬಲ ಕೂಡಬೇಕು. ಶನಿ ಕಾಟ ಕಡಿಮೆಯಾಗಬೇಕು ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.
ಒಬ್ಬೊಬ್ಬರಿಗೆ ಒಂದೊಂದು ರೀತಿಯ ಸಮಸ್ಯೆಗಳಿರುತ್ತವೆ. ಎಲ್ಲದಕ್ಕೂ ಕಾಲ ಕೂಡಿ ಬರಬೇಕು. ಅಲ್ಲಿಯವರೆಗೂ ನಮ್ಮೆಲ್ಲ ಪ್ರಯತ್ನಗಳು ವಿಫಲವಾಗುತ್ತವೆ ಎಂದು ಹೇಳಿದ್ದಾರೆ.
ಸತೀಶ್ ಜಾರಕಿಹೊಳಿ ಮುಂದಿನ ಮುಖ್ಯಮಂತ್ರಿ ಎಂದು ಬೆಂಬಲಿಗರು ಘೋಷಣೆ ಕೂಗುತ್ತಿರುವ ಕುರಿತಾಗಿ ಪ್ರತಿಕ್ರಿಯೆ ನೀಡಿದ ಅವರು, ಮುಖ್ಯಮಂತ್ರಿ ಆಗಲು ಗುರುಬಲ, ತಾರಾ ಬಲ ಕೂಡಬೇಕು. ಅಷ್ಟೇ ಅಲ್ಲ ಶನಿ ಕಾಟ ಕಡಿಮೆ ಆಗಬೇಕು ಎಂದು ಹೇಳಿದ್ದಾರೆ.
ರಾಜ್ಯದಲ್ಲಿ ಸೆಪ್ಟೆಂಬರ್ ಕ್ರಾಂತಿಯ ಬಗ್ಗೆ ನನಗೆ ಏನೂ ಗೊತ್ತಿಲ್ಲ. ಸಚಿವ ಕೆ.ಎನ್. ರಾಜಣ್ಣ ಭೇಟಿಯಾದಾಗ ಅವರನ್ನೇ ಕೇಳುತ್ತೇನೆ. ಕೆಪಿಸಿಸಿ ಅಧ್ಯಕ್ಷರು, ಡಿಸಿಎಂ ಬದಲಾವಣೆ ಬಿಟ್ಟು ಬೇರೆ ಕ್ರಾಂತಿ ಆಗಬಹುದು. ಸಚಿವ ಸಂಪುಟ ವಿಸ್ತರಣೆಗೆ ಮುಹೂರ್ತ ನಿಗದಿಯಾಗಿಲ್ಲ. ರಾಜ್ಯಾಧ್ಯಕ್ಷರ ಬದಲಾವಣೆಗೆ ಅರ್ಜೆಂಟಿಲ್ಲ. ನಾವು ನಮ್ಮ ಅಭಿಪ್ರಾಯವನ್ನು ಹೇಳಿರಬಹುದು ಅಷ್ಟೇ. ಅಧ್ಯಕ್ಷರಾಗಲು ಸಾಕಷ್ಟು ಜನ ಆಕಾಂಕ್ಷಿಗಳಿದ್ದಾರೆ ಎಂದು ಹೇಳಿದ್ದಾರೆ. ಆದರೆ ಏನು ಮಾಡಬೇಕೆಂದು ಹೈಕಮಾಂಡ್ ನಾಯಕರು ನಿರ್ಧರಿಸುತ್ತಾರೆ ಎಂದು ಹೇಳಿದ್ದಾರೆ.