ಬೆಂಗಳೂರು: ಮಾಜಿ ಸಂಸದೆ ಹಾಗೂ ನಟಿ ರಮ್ಯಾ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಸಂದೇಶ ಕಳಿಸುತ್ತಿದ್ದ ಪ್ರಕರಣದ ತನಿಖೆಯನ್ನು ಸಿಸಿಬಿಗೆ ವಹಿಸಲಾಗಿದೆ.
ಈ ಕುರಿತಾಗಿ ನಟಿ ರಮ್ಯಾ ಅವರು 43 ಖಾತೆಗಳನ್ನು ಉಲ್ಲೇಖಿಸಿ ದೂರು ನೀಡಿದ್ದಾರೆ. ಬೆಂಗಳೂರು ಪೊಲೀಸ್ ಕಮಿಷನರ್ ಗೆ ರಮ್ಯಾ 4 ಪುಟಗಳ ದೂರು ನೀಡಿದ್ದು, ದೂರು ಸ್ವೀಕರಿಸಿದ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ನಗರ ಪೊಲೀಸ್ ಆಯುಕ್ತ ಶ್ರೀಮಂತ್ ಕುಮಾರ್ ಸಿಂಗ್ ಅವರು, ಅಪರಾಧ ವಿಭಾಗದ ಜಂಟಿ ಆಯುಕ್ತರ ಮೇಲ್ವಿಚಾರಣೆಯಲ್ಲಿ ಓರ್ವ ಎಸಿಪಿ ಮಟ್ಟದ ಅಧಿಕಾರಿ ನೇತೃತ್ವದಲ್ಲಿ ತನಿಖೆ ಮುಂದುವರೆದಿದೆ. ಪ್ರಕರಣದ ತನಿಖೆಯನ್ನು ಸಿಸಿಬಿಗೆ ವಹಿಸಲಾಗಿದೆ. ದರ್ಶನ್ ಅಭಿಮಾನಿಗಳು ಎಂದು ಹೇಳಿಕೊಂಡು ಸಾಮಾಜಿಕ ಜಾಲತಾಣಗಳಲ್ಲಿ ಅಶ್ಲೀಲ ಸಂದೇಶ ಕಳುಹಿಸಿದ್ದ ಇನ್ಸ್ಟಾಗ್ರಾಮ್ ಖಾತೆಗಳ ವಿರುದ್ಧ ಕ್ರಮ ಕೈಗೊಳ್ಳಲು ರಮ್ಯಾ ದೂರು ನೀಡಿದ್ದು, ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಸಿಸಿಬಿ ಸೈಬರ್ ಠಾಣೆಗೆ ವಹಿಸಲಾಗಿದೆ ಎಂದು ಹೇಳಿದ್ದಾರೆ.
ಮಾಹಿತಿ ತಂತ್ರಜ್ಞಾನ ಕಾಯ್ದೆ ಮತ್ತು ಭಾರತೀಯ ನ್ಯಾಯ ಸಂಹಿತೆ ಕಾಯ್ದೆ ಅಡಿಯಲ್ಲಿ ಎಫ್ಐಆರ್ ದಾಖಲಿಸಿದ್ದು, ಶೀಘ್ರವೇ ಆರೋಪಿಗಳನ್ನು ಪತ್ತೆ ಹಚ್ಚಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಆಯುಕ್ತರು ಮಾಹಿತಿ ನೀಡಿದ್ದಾರೆ.