ಬೆಂಗಳೂರು: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಹೇಳಿಕೆ ನೀಡಿದ್ದ ಚನ್ನಗಿರಿ ಶಾಸಕ ಶಿವಗಂಗಾ ಬಸವರಾಜ್ ಅವರಿಗೆ ಕಾಂಗ್ರೆಸ್ ಶಿಸ್ತುಪಾಲನಾ ಸಮಿತಿಯಿಂದ ನೋಟಿಸ್ ನೀಡಲಾಗಿದೆ.
ಮುಖ್ಯಮಂತ್ರಿ ಬದಲಾವಣೆ ವಿಚಾರವಾಗಿ ಹೇಳಿಕೆ ನೀಡಿದ್ದಕ್ಕೆ ಶಿವಗಂಗಾ ಬಸವರಾಜ್ ಅವರಿಗೆ ಶೋಕಾಸ್ ನೋಟಿಸ್ ನೀಡಲಾಗಿದೆ. ನಿಮ್ಮ ಬಹಿರಂಗ ಹೇಳಿಕೆಯಿಂದ ಪಕ್ಷಕ್ಕೆ ಮುಜುಗರವಾಗಿದೆ. ಶೋಕಾಸ್ ನೋಟಿಸ್ ಗೆ 7 ದಿನದ ಒಳಗೆ ಉತ್ತರ ನೀಡವಂತೆ ಸೂಚನೆ ನೀಡಲಾಗಿದೆ. ಕಾಂಗ್ರೆಸ್ ಶಿಸ್ತು ಸಮಿತಿಯ ಸಂಚಾಲಕ ನಿವೇದಿತಾ ಆಳ್ವ ನೋಟಿಸ್ ನೀಡಿದ್ದಾರೆ.
ಡಿಸಿಎಂ ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿಯಾಗಲಿದ್ದಾರೆ. ಶಿವಕುಮಾರ್ ಮುಖ್ಯಮಂತ್ರಿಯಾಗುವುದು ನಿಶ್ಚಿತ ಎಂದು ಈ ಹಿಂದೆ ಹಲವು ಬಾರಿ ಶಿವಗಂಗಾ ಬಸವರಾಜ್ ಹೇಳಿಕೆ ನೀಡಿದ್ದರು. ಸೂಚನೆ ನೀಡಿದ್ದರೂ ಲೆಕ್ಕಿಸದೇ ಪದೇ ಪದೇ ಹೇಳಿಕೆ ನೀಡಿದ್ದ ಹಿನ್ನೆಲೆಯಲ್ಲಿ ಅವರಿಗೆ ನೋಟಿಸ್ ನೀಡಲಾಗಿದೆ. ಶಿವಗಂಗಾ ಬಸವರಾಜ್ ಗೆ ನೋಟಿಸ್ ನೀಡಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷರಾಗಿರುವ ಡಿಸಿಎಂ ಡಿ.ಕೆ. ಶಿವಕುಮಾರ್ ಮಾಹಿತಿ ನೀಡಿದ್ದರು.