ಬೆಂಗಳೂರು: ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳ ವೈದ್ಯಾಧಿಕಾರಿಗಳು ಮತ್ತು ಇತರೆ ಸಿಬ್ಬಂದಿ ವರ್ಗಾವಣೆ ನಿಯಂತ್ರಣ ತಿದ್ದುಪಡಿ ಕಾಯ್ದೆಗೆ ವಿಧಾನ ಪರಿಷತ್ ನಲ್ಲಿ ಅಂಗೀಕಾರ ದೊರೆತಿದೆ.
ಇನ್ನು ಮುಂದೆ ಸರ್ಕಾರಿ ಸೇವೆಯಲ್ಲಿರುವ ವೈದ್ಯರು, ನರ್ಸ್ ಗಳು ಮತ್ತು ಇತರೆ ಸಿಬ್ಬಂದಿ ಕಡ್ಡಾಯವಾಗಿ ಗ್ರಾಮೀಣ ಪ್ರದೇಶಗಳಲ್ಲಿ ಸೇವೆ ಸಲ್ಲಿಸಬೇಕಿದೆ. ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿದ್ದುಪಡಿ ವಿಧೇಯಕ ಮಂಡಿಸಿದ್ದಾರೆ.
ನಗರ ಪ್ರದೇಶದ ಸರ್ಕಾರಿ ಆಸ್ಪತ್ರೆಗಳಲ್ಲಿ ಅನೇಕ ವರ್ಷಗಳಿಂದ ವೈದ್ಯರು ಹಾಗೂ ಸಿಬ್ಬಂದಿ ಒಂದೇ ಹುದ್ದೆಯಲ್ಲಿ ಕೆಲಸ ಮಾಡುತ್ತಿದ್ದಾರೆ. ಇವರನ್ನು ವರ್ಗಾವಣೆ ಮಾಡಿದಾಗ ನ್ಯಾಯಾಲಯದಲ್ಲಿ ತಡೆಯಾಜ್ಞೆ ತಂದು ವರ್ಗಾವಣೆ ತಪ್ಪಿಸುತ್ತಿದ್ದಾರೆ. ಇದರಿಂದ ಗ್ರಾಮೀಣ ಪ್ರದೇಶದಲ್ಲಿ ವೈದ್ಯಕೀಯ ಸಿಬ್ಬಂದಿ ಕೊರತೆ ಹೆಚ್ಚಾಗಿದ್ದು, ಇದನ್ನು ತಡೆಯಲು ತಿದ್ದುಪಡಿ ವಿಧೇಯಕ ತರಲಾಗಿದೆ ಎಂದು ತಿಳಿಸಿದ್ದಾರೆ.
ಅನೇಕ ವರ್ಷಗಳಿಂದ ಒಂದೇ ಸ್ಥಳದಲ್ಲಿ ಕೆಲಸ ಮಾಡುತ್ತಿರುವ ವೈದ್ಯರು ಬಡ್ತಿ ಸಂದರ್ಭದಲ್ಲಿ ಕಡ್ಡಾಯವಾಗಿ ಗ್ರಾಮೀಣ ಸೇವೆ ಸಲ್ಲಿಸಬೇಕಿದೆ. ಗ್ರೇಟರ್ ಬೆಂಗಳೂರು ನಗರವನ್ನು ಎ, ಬಿ, ಸಿ, ಡಿ, ವಲಯಗಳಾಗಿ ವಿಭಜಿಸಿದ್ದು, ಒಂದೇ ವಲಯದಲ್ಲಿ ದೀರ್ಘಕಾಲ ಸೇವೆ ಸಲ್ಲಿಸಿದವರು ಗ್ರಾಮೀಣ ಭಾಗದಲ್ಲಿ ಕರ್ತವ್ಯ ನಿರ್ಮಿಸಲು ಕಡ್ಡಾಯಗೊಳಿಸಲಾಗಿದೆ.
ತಜ್ಞ ವೈದ್ಯರು ಅಗತ್ಯವಿರುವ ಹುದ್ದೆಗಳಲ್ಲಿ ಮುಂದುವರಿಸಲು ಅವಕಾಶ ಕಲ್ಪಿಸಲಾಗಿದೆ. ಚಿಕ್ಕಮಕ್ಕಳು ಇರುವವರು, ನಿವೃತ್ತಿ ಅಂಚಿನಲ್ಲಿರುವವರಿಗೆ ವರ್ಗಾವಣೆಗೆ ವಿನಾಯಿತಿ ನೀಡಲಾಗಿದೆ. ಕೌನ್ಸೆಲಿಂಗ್ ಮೂಲಕ ವರ್ಗಾವಣೆ ಪ್ರಕ್ರಿಯೆ ನಡೆಸಲಾಗುವುದು. ಇದರಿಂದ ಯಾರು ಕೂಡ ಒಂದೇ ಸ್ಥಳದಲ್ಲಿ ದೀರ್ಘಕಾಲ ಸೇವೆ ಸಲ್ಲಿಸುವ ಪರಿಸ್ಥಿತಿ ಇರುವುದಿಲ್ಲ.