ಬೆಂಗಳೂರು: ರಾಜ್ಯದಲ್ಲಿ ಬೈಕ್ ಟ್ಯಾಕ್ಸಿಗಳ ಕಾರ್ಯಾಚರಣೆ ಪುನರಾರಂಭವಾಗಿದೆ. ಬೈಕ್ ಟ್ಯಾಕ್ಸಿಗಳ ಕಾರ್ಯಾಚರಣೆ ಮುಂದುವರೆಗೆ ಸಂಬಂಧಿಸಿದ ಪ್ರಕರಣ ನ್ಯಾಯಾಲಯದಲ್ಲಿ ಇತ್ಯರ್ಥವಾಗುವ ಮೊದಲೇ ಆ್ಯಪ್ ಆಧಾರಿತ ಅಗ್ರಿಗೇಟರ್ ಕಂಪನಿಗಳು ರಾಜಧಾನಿ ಬೆಂಗಳೂರು ಸೇರಿ ಹಲವು ನಗರಗಳಲ್ಲಿ ಗುರುವಾರದಿಂದಲೇ ನಿಯಮಬಾಹಿರವಾಗಿ ಬೈಕ್ ಟ್ಯಾಕ್ಸಿ ಸೇವೆಯನ್ನು ಪುನರಾರಂಭಿಸಿದೆ.
ಬೈಕ್ ಟ್ಯಾಕ್ಸಿಗಳ ಕಾರ್ಯಾಚರಣೆ ಮುಂದುವರೆಸುವ ಬಗ್ಗೆ ಒಂದು ತಿಂಗಳೊಳಗೆ ನಿಲುವು ತಿಳಿಸುವಂತೆ ಸರ್ಕಾರಕ್ಕೆ ಹೈಕೋರ್ಟ್ ಬುಧವಾರ ಸೂಚನೆ ನೀಡಿತ್ತು. ಇದರ ಬೆನ್ನಲ್ಲೇ ಉಬರ್ ಹಾಗೂ ರ್ಯಾಪಿಡೋ ಅಗ್ರಿಗೇಟರ್ ಕಂಪನಿಗಳು ಬೈಕ್ ಟ್ಯಾಕ್ಸಿ ಸೇವೆಯನ್ನು ಆರಂಭಿಸಿವೆ. ಬೈಕ್ ಟ್ಯಾಕ್ಸಿಗಳ ನಿಷೇಧಕ್ಕೆ ಖಾಸಗಿ ಸಾರಿಗೆ ಸಂಘಟನೆಗಳು ಒತ್ತಾಯಿಸಿದ್ದ ಹಿನ್ನೆಲೆಯಲ್ಲಿ ಸುರಕ್ಷತೆ ದೃಷ್ಟಿಯಿಂದ ಹೈಕೋರ್ಟ್ ಏಕ ಸದಸ್ಯ ಪೀಠದ ಆದೇಶದ ಅನ್ವಯ ಸರ್ಕಾರ ಜೂನ್ 16ರಿಂದ ರಾಜ್ಯದಲ್ಲಿ ಬೈಕ್ ಟ್ಯಾಕ್ಸಿ ಸೇವೆ ಸ್ಥಗಿತಗೊಳಿಸಿತ್ತು. ಆದೇಶ ಲೆಕ್ಕಿಸದೇ ಬೈಕ್ ಟ್ಯಾಕ್ಸಿ ಸೇವೆಗಳ ಮುಂದುವರೆಸಿದ್ದ ಅಗ್ರಿಗೇಟರ್ ಕಂಪನಿಗಳ ವಿರುದ್ಧ ಪ್ರಕರಣ ದಾಖಲಿಸಿ ಬೈಕ್ ಟ್ಯಾಕ್ಸಿಗಳನ್ನು ಜಪ್ತಿ ಮಾಡಲಾಗಿತ್ತು.