ಬೆಂಗಳೂರು: ಆಗಸ್ಟ್ 27ರಿಂದ ರಾಜ್ಯದಲ್ಲಿ ಮತ್ತೆ ಮುಂಗಾರು ಮಳೆ ಚುರುಕುಗೊಳ್ಳುವ ಸಾಧ್ಯತೆ ಇದೆ. ಕರಾವಳಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಎಚ್ಚರಿಕೆ ನೀಡಲಾಗಿದೆ.
ರಾಜ್ಯದಲ್ಲಿ 3-4 ದಿನಗಳಿಂದ ಮಳೆಯ ಅಬ್ಬರ ಕಡಿಮೆಯಾಗಿದ್ದು, ಇನ್ನೂ ಒಂದೆರಡು ದಿನ ಬಹುತೇಕ ಸ್ಥಳದಲ್ಲಿ ಒಣಹವೆ ಇರುತ್ತದೆ. ಅಲ್ಲಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ. ಆಗಸ್ಟ್ 27ರಿಂದ ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಳೆ ಮಾರುತಗಳು ಚುರುಕುಗೊಳ್ಳಲಿದ್ದು, ಹೆಚ್ಚಿನ ಪ್ರಮಾಣದ ಮಳೆಯಾಗುವ ಸಂಭವ ಇದೆ. ಗಂಟೆಗೆ 40 ಕಿ.ಮೀ.ವೇಗದಲ್ಲಿ ಗಾಳಿ ಬೀಸುವುದರಿಂದ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಎಚ್ಚರಿಕೆ ನೀಡಲಾಗಿದೆ.
ಆಗಸ್ಟ್ 28ರಿಂದ ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು ಜಿಲ್ಲೆಗಳಲ್ಲಿ ಭಾರಿ ಮಳೆ ಶುರುವಾಗಲಿದೆ. ಹೀಗಾಗಿ ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡಿನ ಎಲ್ಲ ಜಿಲ್ಲೆಗಳಲ್ಲಿಯೂ ಮಳೆ ಬಿರುಸುಗೊಳ್ಳಲಿದೆ ಎಂದು ಹೇಳಲಾಗಿದೆ.