BREAKING: ಸೆ. 2ರ ಬದಲು 1ರ ಮಧ್ಯರಾತ್ರಿಯೇ ನಟ ಸುದೀಪ್ ಹುಟ್ಟುಹಬ್ಬ ಆಚರಣೆ: ಅಭಿಮಾನಿಗಳಿಗೆ ಅಭಿನಯ ಚಕ್ರವರ್ತಿ ಪತ್ರ

ಸೆ. 2ರಂದು ನಟ ಕಿಚ್ಚ ಸುದೀಪ್ ಅವರ ಜನ್ಮದಿನವನ್ನು ಅದ್ದೂರಿಯಾಗಿ ಆಚರಿಸಲು ಅಭಿಮಾನಿಗಳು ಸಿದ್ಧತೆ ಮಾಡಿಕೊಂಡಿದ್ದಾರೆ. ವಿವಿಧ ಸೇವಾ ಕಾರ್ಯಗಳ ಮೂಲಕ ನೆಚ್ಚಿನ ನಟನ ಹುಟ್ಟುಹಬ್ಬವನ್ನು ಆಚರಿಸಲು ಅಭಿಮಾನಿಗಳು ತಯಾರಿ ಮಾಡಿಕೊಂಡಿದ್ದಾರೆ.

ಆದರೆ, ಸೆ.2ರ ಬದಲಾಗಿ ಸೆ.1ರ ಮಧ್ಯರಾತ್ರಿಯೇ ಅಭಿಮಾನಿಗಳೊಂದಿಗೆ ಜನ್ಮ ದಿನಾಚರಣೆ ನಡೆಯಲಿದೆ. ಸೆ. 2ರಂದು ತಮ್ಮ ಮನೆಯ ಬಳಿ ಬರದಂತೆ ಅಭಿಮಾನಿಗಳಿಗೆ ಮನವಿ ಮಾಡಿರುವ ಸುದೀಪ್, ಅಮ್ಮನಿಲ್ಲದೆ ಜನ್ಮದಿನದ ಸಂಭ್ರಮವನ್ನು ಊಹಿಸಿಕೊಳ್ಳುವುದು ಕಷ್ಟ. ಅವರಿಲ್ಲದ ಮೊದಲ ವರ್ಷವಾಗಿರುವುದರಿಂದ ಮನೆಯ ಬಳಿ ಶಾಂತಿಯ ವಾತಾವರಣ ಇರಲಿ ಎಂದು ಅಭಿಮಾನಿಗಳಿಗೆ ಮನವಿ ಮಾಡಿಕೊಂಡಿದ್ದಾರೆ.

ಸೆ. 1ರ ಮಧ್ಯರಾತ್ರಿ ಅಭಿಮಾನಿಗಳ ಜೊತೆಗೆ ಜನ್ಮದಿನ ಆಚರಿಸಿಕೊಳ್ಳಲಿದ್ದು, ಸ್ಥಳದ ವಿವರ ತಿಳಿಸುವುದಾಗಿ ಅವರು ಪತ್ರದಲ್ಲಿ ಹೇಳಿದ್ದಾರೆ.

“ಪ್ರಿಯ ಸ್ನೇಹಿತರೇ..

ಸೆಪ್ಟೆಂಬರ್ ಎರಡರ ಬೆಳಗಿನಲ್ಲಿ ಅಲ್ಲ ಸೆಪ್ಟೆಂಬರ್ ಒಂದರ ರಾತ್ರಿಯೇ ಸಿಗೋಣವಾ…!

ಸೆಪ್ಟೆಂಬರ್ ಎರಡರಂದು ನೀವು ನನ್ನನ್ನು ಭೇಟಿಮಾಡುವುದಕ್ಕಾಗಿ ಎಷ್ಟು ಕಾಯುವಿರೋ ಅದಕ್ಕಿಂತ ಹೆಚ್ಚಾಗಿ ನಾನು ನಿಮಗಾಗಿ ಕಾಯುತ್ತೇನೆ. ಆ ದಿನ ನೀವು ಪಡುವ ಸಂಭ್ರಮ, ಆಚರಿಸುವ ವಿಡಿಯೋಗಳನ್ನು ನೋಡಿದಾಗ ಪ್ರತಿಸಲವೂ ನನಗೆ ಮರುಹುಟ್ಟು ಪಡೆದಂತಾಗುತ್ತದೆ. ನಿಸ್ಸಂದೇಹವಾಗಿ ನನ್ನ ಬದುಕಿಗೆ ಮೌಲ್ಯ ತುಂಬಿದವರು ನೀವು. ನಿಮ್ಮೆದರು ನಿಂತು ವಿನೀತನಾಗುವುದಕ್ಕಿಂತ ಖುಷಿ ಏನಿದೆ? ಆದ್ದರಿಂದಲೇ ದಶಕಗಳಿಂದ ನಿಮ್ಮನ್ನು ಮನೆಯ ಹತ್ತಿರ ಭೇಟಿಮಾಡುತ್ತಲೇ ನಾನೂ ಸಂಭ್ರಮಸಿದ್ದೇನೆ. ಆದರೆ ಈ ಸಲ ತುಂಬಾ ಕಷ್ಟವಾಗುತ್ತಿದೆ ಏಕೆಂದರೆ ಅಮ್ಮನಿಲ್ಲದ ಮೊದಲ ವರ್ಷವಿದು. ಅಮ್ಮನಿಲ್ಲದ ಸಂಭ್ರಮವನ್ನು ಊಹಿಸಿಕೊಳ್ಳುವುದೂ ನನಗೆ ಕಷ್ಟವಾಗುತ್ತಿದೆ.

ಆದರೆ ನಿಮ್ಮನ್ನು ನಿರಾಸೆಗೊಳಿಸುವುದು ನನಗಿಷ್ಟವಿಲ್ಲ! ನಿಮ್ಮ ಮೂಲಕವೇ ನನ್ನ ಹುಟ್ಟಬ್ಬ ಹುಟ್ಟಬೇಕು!. ಗಡಿಯಾರ ಹನ್ನೆರಡು ಗಂಟೆ ಎಂದು ಸದ್ದುಮಾಡುವಾಗ ನನಗೆ ನಿಮ್ಮ ಶುಭಾಶಯಗಳೇ ಕಿವಿಗೆ ಕೇಳಬೇಕು. ಅವುಗಳೇ ಎದೆಗೆ ಇಳಿಯಬೇಕು. ಆದ್ದರಿಂದ ಸೆಪ್ಟೆಂಬರ್ ಒಂದರ ರಾತ್ರಿ ನಾವೆಲ್ಲರೂ ಒಂದು ಕಡೆ ಸೇರೋಣ. ಎಲ್ಲಿ, ಹೇಗೆ? ಅನ್ನೋದನ್ನು ತಿಳಿಸುತ್ತೇನೆ. ಆದರೆ ಮಾರನೇ ದಿನ ಅಂದರೆ ಸೆಪ್ಟೆಂಬರ್ 2 ರಂದು ದಯವಿಟ್ಟು ಯಾರೂ ಮನೆ ಹತ್ತಿರ ಬರಬೇಡಿ. ನಾನು ಆ ದಿನ ಮನೆಯಲ್ಲಿ ಇರುವುದಿಲ್ಲ. ನಾನಿರುವುದಿಲ್ಲವೆಂದು ಹೇಳಿದ ಮೇಲೂ ನೀವು ಮನೆ ಬಳಿ ಬಂದು ಕಾದರೆ ನನ್ನ ಮನಸಿಗೆ ನೋವಾಗುತ್ತದೆ. ಜೊತೆಗೆ ಈ ಸಲ ಅಮ್ಮನಿಲ್ಲದ ಮೊದಲ ವರ್ಷವಾಗಿರುವುದರಿಂದ ಮನೆ ಬಳಿ ಚೂರು ಶಾಂತಿ ವಾತಾವರಣ ಇರಲೆಂದು ಬಯಸುತ್ತಿದ್ದೇನೆ. ನನಗೆ ನಂಬಿಕೆ ಇದೆ; ನೀವು ನನ್ನನ್ನು ಅರ್ಥಮಾಡಿಕೊಳ್ಳುವಿರೆಂದು ಮತ್ತು ನಿರಾಸೆಗೊಳಿಸುವುದಿಲ್ಲವೆಂದು. ಅದು ಬಿಟ್ಟರೆ ಪ್ರತಿವರ್ಷದಂತೆ ಈ ವರ್ಷವೂ ಸಾಮಾಜಿಕ ಸೇವಾ ಕಾರ್ಯಗಳು ಯಥಾಪ್ರಕಾರ ನಡೆಯಲಿವೆ. ನಿಮ್ಮ ಹಾರೈಕೆ, ಅಭಿಮಾನ ಮತ್ತು ಸಾಂಗತ್ಯವೇ ನನ್ನ ಬಹುದೊಡ್ಡ ಆಸ್ತಿ.

ಸದಾ ಪ್ರೀತಿ ಇರಲಿ.

ನಿಮ್ಮ

ಕಿಚ್ಚ.”

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read