ಬೆಂಗಳೂರು: ನೇರ ನೇಮಕಾತಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ. ಒಳ ಮೀಸಲಾತಿ ಜಾರಿಗೆ ಸಂಬಂಧಿಸಿದಂತೆ ನೇರ ನೇಮಕಾತಿಗೆ ತಡೆ ಹಿಡಿಯಲಾಗಿತ್ತು.
ಇದೀಗ ನೇರ ನೇಮಕಾತಿ ಪ್ರಕ್ರಿಯೆಯನ್ನು ಪುನರಾರಂಭಿಸುವಂತೆ ರಾಜ್ಯ ಸರ್ಕಾರ ಸೂಚನೆ ನೀಡಿದೆ.
ನೇರ ನೇಮಕಾತಿಗೆ ಗ್ರೀನ್ ಸಿಗ್ನಲ್ ನೀಡಿರುವ ಸರ್ಕಾರದಿಂದ ಸುತ್ತೋಲೆ ಹೊರಡಿಸಲಾಗಿದೆ.
ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯಿಂದ ಸುತ್ತೋಲೆ ಹೊರಡಿಸಲಾಗಿದೆ.
ಬಿ, ಸಿ ಹುದ್ದೆಗಳಿಗೆ ನೇರ ನೇಮಕಾತಿಗಳಲ್ಲಿ 2 ವರ್ಷ ವಯೋಮಿತಿ ಸಡಿಲಿಕೆ
ರಾಜ್ಯ ಸಿವಿಲ್ ಸೇವೆಗಳಲ್ಲಿನ ಗ್ರೂಪ್ ಬಿ ಮತ್ತು ಗ್ರೂಪ್ ಸಿ ಹುದ್ದೆಗಳಿಗೆ ಮಾಡುವ ನೇರ ನೇಮಕಾತಿಗಳಲ್ಲಿ ಅಭ್ಯರ್ಥಿಗಳಿಗೆ ನಿಗದಿಪಡಿಸಿರುವ ಗರಿಷ್ಠ ವಯೋಮಿತಿಯನ್ನು ಒಂದು ಬಾರಿಯ ಕ್ರಮವಾಗಿ ಸಡಿಲಿಕೆ ಮಾಡಲಾಗಿದೆ.
31.12.2027 ರವರೆಗೆ ನೇರ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಿ ಹೊರಡಿಸುವ ಅಧಿಸೂಚನೆಗಳನ್ನಯ ಆಯ್ಕೆ ಪ್ರಕ್ರಿಯೆಯಲ್ಲಿ ಭಾಗವಹಿಸುವ ಎಲ್ಲಾ ಪ್ರವರ್ಗಗಳ ಅಭ್ಯರ್ಥಿಗಳಿಗೆ ಸಂಬಂಧಿಸಿದಂತೆ ಆಯಾ ನೇಮಕಾತಿ ನಿಯಮಗಳಲ್ಲಿ ನಿಗದಿಪಡಿಸಿರುವ ಗರಿಷ್ಠ ವಯೋಮಿತಿಯಲ್ಲಿ ಒಂದು ಬಾರಿಯ ಕ್ರಮವಾಗಿ (as a one-time measure) 2 ವರ್ಷಗಳ ಸಡಿಲಿಕೆ ನೀಡಿ ಆದೇಶಿಸಲಾಗಿದೆ.
80 ಸಾವಿರಕ್ಕೂ ಅಧಿಕ ಹುದ್ದೆ ಭರ್ತಿ
ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ವರ್ಗೀಕರಣದಂತೆ ಈಗಾಗಲೇ ನಿಗದಿಯಾದ ರೋಸ್ಟರ್ ಬಿಂದು ಆಧರಿಸಿ ಅನುಮೋದಿತ ಹುದ್ದೆಗಳ ನೇರ ನೇಮಕಾತಿಗೆ ಹೊಸದಾಗಿ ಅಧಿಸೂಚನೆ ಹೊರಡಿಸಲು ಮತ್ತು ಕಾಲಮಿತಿಯಲ್ಲಿ ನೇಮಕಾತಿ ಪ್ರಕ್ರಿಯೆ ಪೂರ್ಣಗೊಳಿಸಲು ಎಲ್ಲಾ ನೇಮಕಾತಿ ಪ್ರಾಧಿಕಾರಗಳಿಗೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಸೂಚನೆ ನೀಡಿ ಸುತ್ತೋಲೆ ಹೊರಡಿಸಿದೆ.
ಕೃಷಿ, ಪಶು ಸಂಗೋಪನೆ, ಶಿಕ್ಷಣ, ಪೊಲೀಸ್, ಆರೋಗ್ಯ ಇಲಾಖೆ, ಗ್ರಾಮೀಣಾಭಿವೃದ್ಧಿ ಸೇರಿದಂತೆ ವಿವಿಧ ಇಲಾಖೆಗಳ ಸುಮಾರು 80,000ಕ್ಕೂ ಅಧಿಕ ಹುದ್ದೆಗಳ ಭರ್ತಿಗೆ ಸಂಬಂಧಿತ ನೇಮಕಾತಿ ಪ್ರಾಧಿಕಾರಗಳಿಂದ ಸರಣಿ ಅಧಿಸೂಚನೆಗಳು ಶೀಘ್ರವೇ ಹೊರಬೀಳಲಿವೆ. ಈ ಮೂಲಕ ವರ್ಷಗಳಿಂದ ಸ್ಥಗಿತಗೊಂಡಿದ್ದ ನೇಮಕ ಪ್ರಕ್ರಿಯೆ ಶುರುವಾಗಲಿದೆ ಎಂದು ಹೇಳಲಾಗಿದೆ.