ಭರೂಚ್: ಗುಜರಾತ್ ನ ಭರೂಚ್ ಜಿಲ್ಲೆಯಲ್ಲಿರುವ ಆರ್ಗಾನಿಕ್ ಕಾರ್ಖಾನೆಯಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದೆ. ಬೆಂಕಿಯ ಕೆನ್ನಾಲಿಗೆ ಮುಗಿಲೆತ್ತರದವೆರೆಗೆ ವ್ಯಾಪಿಸಿದೆ.
ಇಲ್ಲಿನ ಜಿಐಡಿಸಿ ಪಲೋನಿಯಲ್ಲಿರುವ ಸಂಘ್ವಿ ಆರ್ಗಾನಿಕ್ಸ್ ಪ್ರೈವೆಟ್ ಲಿಮಿಟೆಡ್ ಕಾರ್ಖಾನೆಯಲ್ಲಿ ಏಕಾಏಕಿ ಬೆಂಕಿ ಅವಘಡ ಸಂಭವಿಸಿದ್ದು, ನೋಡ ನೋಡುತ್ತಿದ್ದಂತೆ ಇಡೀ ಕಾರ್ಖಾನೆ ಧಗಧಗನೆ ಹೊತ್ತಿ ಉರಿದಿದೆ.
ಸುತ್ತಮುತ್ತಲ ಪ್ರದೇಶದಲ್ಲಿ ದಟ್ಟ ಹೊಗೆ ಆವರಿಸಿದೆ. ಬೆಂಕಿಯ ಜ್ವಾಲೆ ಇಡೀ ಕೈಗಾರಿಕಾ ಪ್ರದೇಶದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗುವಂತೆ ಮಾಡಿದೆ. ಸ್ಥಳಕ್ಕೆ ಧಾವಿಸಿರುವ ಅಗ್ನಿಶಾಮಕ ಸಿಬ್ಬಂದಿಗಳು ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ. ಬೆಂಕಿ ಅವಘಡಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ. ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.