ಕಲಬುರಗಿ: ಕಲ್ಯಾಣ ಕರ್ನಾಟಕ ಭಾಗದ ಜಿಲ್ಲೆಗಳಲ್ಲಿ ಎಸ್ ಎಸ್ ಎಲ್ ಸಿ ಫಲಿತಾಂಶ ಕುಸಿತ ಕಂಡ ಹಿನ್ನೆಲೆಯಲ್ಲಿ ಖಾಲಿ ಇರುವ 5267 ಶಿಕ್ಷಕರ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.
ಕಲಬುರಗಿಯ ಪೊಲೀಸ್ ಪರೇಡ್ ಮೈದಾನದಲ್ಲಿ ಕಲ್ಯಾಣ ಕರ್ನಾಟಕ ಉತ್ಸವದ ಅಂಗವಾಗಿ ರಾಷ್ಟ್ರಧ್ವಜಾರೋಹಣ ನೆರವೇರಿಸಿ ಮಾತನಡಿದ ಸಿಎಂ ಸಿದ್ದರಾಮಯ್ಯ, ಕಲ್ಯಾಣ ಕರ್ನಾಟಕ ಭಾಗದಲ್ಲಿ ಶೈಕ್ಷಣಿಕ ಪ್ರಗತಿ ಸಾಧಿಸಲು ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಲಿದೆ. ಸಮಾಜ ಕಲ್ಯಾಣ, ಬಿಸಿಎಂ ಇಲಾಖೆ ಹಾಗೂ ಅಲ್ಪಸಂಖ್ಯಾತ ಇಲಾಖೆ ವತಿಯಿಂದ ಹೊಸದಾಗಿ ವಸತಿ ಶಾಲೆ ಹಾಗೂ ವಸತಿ ನಿಲಯಗಳನ್ನು ನಿರ್ಮಿಸಲಾಗುತ್ತಿದೆ ಎಂದರು.
ಸಚಿವ ಸಂಪುಟ ಸಭೆಯಲ್ಲಿ ಕಲ್ಯಾಣ ಕರ್ನಾಟಕ ಭಾಗಕ್ಕೆ ಪ್ರತ್ಯೇಕ ಸಚಿವಾಲಯ ರಚಿಸಲು ಆದೇಶ ಹೊರಡಿಸಲಾಗಿದೆ. ಒಂದು ವಾರದಲ್ಲಿ ಹುದ್ದೆ ಸಹಿತ ಪ್ರತ್ಯೇಕ ಅಧಿಸೂಚನೆ ಹೊರಡಿಸಲಾಗುವುದು ಎಂದರು.