ಬೆಂಗಳೂರು : ರಾಜ್ಯ ಸರ್ಕಾರವು ಜಾತಿ ಗಣತಿಗೆ ಜಾತಿ-ಉಪಜಾತಿಗಳ ಪಟ್ಟಿ ಬಿಡುಗಡೆ ಮಾಡಿದ್ದು, ಕರ್ನಾಟಕದಲ್ಲಿ ಬರೋಬ್ಬರಿ 1561 ಕ್ಕೂ ಹೆಚ್ಚು ಜಾತಿಗಳು ಇದೆ ಎಂದು ಸರ್ಕಾರ ಮಾಹಿತಿ ನೀಡಿದೆ.
ರಾಜ್ಯದಲ್ಲಿ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದಿಂದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕಾರ್ಯ ಸೆಪ್ಟಂಬರ್ 22 ರಿಂದ ಅಕ್ಟೋಬರ್ 7ರ ವರೆಗೆ ನಡೆಯಲಿದೆ. 2015ರಲ್ಲಿ ಆಯೋಗದ ಅಧ್ಯಕ್ಷರಾಗಿದ್ದ ಕಾಂತರಾಜ್ ಅವರು ವರದಿಯನ್ನು ಸಲ್ಲಿಸಿದ್ದರು. ಕಾಂತರಾಜ್ ಅವರು ವರದಿಯನ್ನು ಸಲ್ಲಿಸಿ 10 ವರ್ಷ ಆದ ಕಾರಣ ಹೊಸ ಸಮೀಕ್ಷೆಗೆ ತೀರ್ಮಾನ ಮಾಡಿ ಆ ಕಾರ್ಯವನ್ನು ಶಾಶ್ವತ ಹಿಂದುಳಿದ ವರ್ಗಗಳ ಆಯೋಗಕ್ಕೆ ಈಗ ವಹಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಮಾಹಿತಿ ನೀಡಿದ್ದಾರೆ.
ಸಮೀಕ್ಷೆ ಕಾರ್ಯದಲ್ಲಿ ಪ್ರತಿಯೊಬ್ಬರೂ ಪಾಲ್ಗೊಳ್ಳಬೇಕು. ಯಾರೂ ಕೂಡಾ ಸಮೀಕ್ಷೆಯಿಂದ ಹೊರಗುಳಿಯಬಾರದು. ಸಮೀಕ್ಷೆಯಲ್ಲಿ 60 ಪ್ರಶ್ನೆಗಳನ್ನು ಕೇಳಲಾಗುವುದು. ಎಲ್ಲರೂ ಪ್ರತಿಯೊಂದು ಪ್ರಶ್ನೆಗಳಿಗೆ ಸಮರ್ಪಕವಾದ ಮಾಹಿತಿಯನ್ನು ಒದಗಿಸಬೇಕು. ಸರಿಯಾದ ಮಾಹಿತಿ ನೀಡಿದರೆ ಮಾತ್ರ ವೈಜ್ಞಾನಿಕ ಸಮೀಕ್ಷೆ ಸಾಧ್ಯವಿದೆ.
ಆಯೋಗದ ಸಹಾಯವಾಣಿ ಸಂಖ್ಯೆ 8050770004 ಗೆ ಕರೆ ಮಾಡಿ ಸಾರ್ವಜನಿಕರು ಸಮೀಕ್ಷೆ ಕುರಿತು ಯಾವುದೇ ದೂರು ಅಥವಾ ಮಾಹಿತಿಯನ್ನು ಪಡೆಯಬಹುದು. ಆನ್ ಲೈನ್ ಮೂಲಕ ಸಹ ಸಮೀಕ್ಷೆಯಲ್ಲಿ ಭಾಗವಹಿಸಲು ಅವಕಾಶ ಕಲ್ಪಿಸಲಾಗಿದೆ. ಸಮೀಕ್ಷೆ ಆರಂಭವಾಗುವ ಪೂರ್ವದಲ್ಲೇ ಆಶಾ ಕಾರ್ಯಕರ್ತರು ಎಲ್ಲರ ಮನೆಗಳಿಗೆ ಹೋಗಿ ಸಮೀಕ್ಷೆಯ ನಮೂನೆಯನ್ನು ಒದಗಿಸಲಿದ್ದಾರೆ. ಇದರಿಂದ ಸರಿಯಾದ ಮಾಹಿತಿಯನ್ನು ಒದಗಿಸುವ ಬಗ್ಗೆ ಜಾಗೃತಿ ಮೂಡಲು ಸಾಧ್ಯವಿದೆ. ಪ್ರತಿ ಶಿಕ್ಷಕರಿಗೆ 120ರಿಂದ 150ಮನೆಗಳ ವ್ಯಾಪ್ತಿಯನ್ನು ನಿಗದಿಪಡಿಸಲಾಗಿದೆ.
































