ಬೆಂಗಳೂರು: ಅಕ್ಟೋಬರ್ ಅಂತ್ಯದೊಳಗೆ ಎಲ್ಲಾ ರಸ್ತೆ ಗುಂಡಿ ಮುಚ್ಚಲು ಸಿಎಂ ಸಿದ್ಧರಾಮಯ್ಯ ಗಡುವು ನೀಡಿದ್ದಾರೆ. ಬೆಂಗಳೂರು ನಗರ ರಸ್ತೆಗಳ ಸುಧಾರಣೆ ಹಾಗೂ ಸಂಚಾರ ವ್ಯವಸ್ಥೆ ಕುರಿತು ಗೃಹ ಕಚೇರಿ ಕೃಷ್ಣಾದಲ್ಲಿ ಸಭೆ ನಡೆಸಿದ ಸಿಎಂ ಹಲವು ಸೂಚನೆಗಳನ್ನು ನೀಡಿದ್ದಾರೆ.
ಸಭೆಯ ಮುಖ್ಯಾಂಶಗಳು ಹೀಗಿವೆ:
* ರಸ್ತೆ ಗುಂಡಿಗಳಿಂದ ವಾಹನ ಸವಾರರು ನಿತ್ಯ ಸಮಸ್ಯೆ ಎದುರಿಸುತ್ತಿದ್ದಾರೆ, ಈ ಬಗ್ಗೆ ಆಕ್ರೋಶ ಕೇಳಿಬರುತ್ತಿದ್ದರೂ ಈ ವರೆಗೆ ಗುಂಡಿ ಮುಚ್ಚದೆ ಇರುವುದು ಅಕ್ಷಮ್ಯ.
* ಪ್ರತಿ ವಾರ್ಡ್ ನ ಎಂಜಿನಿಯರ್ ಗಳು, ಮುಖ್ಯ ಎಂಜಿನಿಯರ್ ಗಳು ಈಗಾಗಲೇ ಕ್ರಮ ವಹಿಸಬೇಕಿತ್ತು. ಇನ್ನು ಒಂದು ತಿಂಗಳ ಕಾಲಾವಕಾಶ ನೀಡುತ್ತೇವೆ. ರಸ್ತೆ ಗುಂಡಿಗಳನ್ನು ಮುಚ್ಚಲು ಕಟ್ಟುನಿಟ್ಟಿನ ಕ್ರಮ ವಹಿಸಲೇಬೇಕು ಮತ್ತು ರಸ್ತೆಗಳನ್ನು ಸಂಚಾರ ಯೋಗ್ಯ ಮಾಡಲೇಬೇಕು.
* ರಸ್ತೆ ನಿರ್ವಹಣೆಗೆ ಸೂಕ್ತ ಕ್ರಮ ವಹಿಸದ ಅಧಿಕಾರಿಗಳ ಮೇಲೆ ಮುಲಾಜಿಲ್ಲದೆ ಕಠಿಣ ಕ್ರಮ ಕೈಗೊಳ್ಳಲಾಗುವುದು.
* ಗುತ್ತಿಗೆದಾರರೊಂದಿಗೆ ಶಾಮೀಲಾಗದೆ ಒದಗಿಸಿರುವ ಅನುದಾನಕ್ಕೆ ಉತ್ತಮ ಗುಣಮಟ್ಟದ ಕಾಮಗಾರಿಗಳನ್ನು,
ವೈಜ್ಞಾನಿಕವಾದ ಕಾಮಗಾರಿಗಳನ್ನು ಪೂರೈಸಲು ಕ್ರಮ ವಹಿಸಬೇಕು.
* ಮಳೆಗಾಲಕ್ಕೆ ಮುನ್ನವೇ ರಸ್ತೆ ಕಾಮಗಾರಿಗಳನ್ನು ಯಾಕೆ ಮಾಡುತ್ತಿಲ್ಲ, ಮಳೆಗಾಲದಲ್ಲಿಯೇ ಏಕೆ ಪ್ರಾರಂಭಿಸುವಿರಿ? ಗ್ರೇಟರ್ ಬೆಂಗಳೂರು ಪ್ರಾಧಿಕಾರಕ್ಕೆ ನೂತನವಾಗಿ ನೇಮಕಗೊಂಡಿರುವ ಆಯುಕ್ತರು ಫೀಲ್ಡ್ ವರ್ಕ್ ಮಾಡಿ, ನಿಗಾ ಇರಿಸಬೇಕು.
* ಬಿಡಿಎ, ಬಿಎಂಆರ್‌ಸಿಎಲ್, ಜಲಮಂಡಳಿ ಅಧಿಕಾರಿಗಳು ಸಮನ್ವಯದಿಂದ ಕೆಲಸ ಮಾಡಬೇಕು.
* ರಸ್ತೆ ಗುಂಡಿಗಳನ್ನು ಮುಚ್ಚಲು ಹಾಗೂ ಎಲ್ಲಾ ರಸ್ತೆಗಳನ್ನು ಸಂಚಾರ ಯೋಗ್ಯ ಮಾಡಲು ಒಂದು ತಿಂಗಳ ಗಡುವು ನೀಡಲಾಗುವುದು, ಎಲ್ಲಾ ಇಲಾಖೆಗಳು ಸಮನ್ವಯತೆಯಿಂದ ಕಾರ್ಯ ನಿರ್ವಹಿಸಬೇಕು.
* ಮುಖ್ಯ ಆಯುಕ್ತರು ಪ್ರತಿ ವಾರ ಐದೂ ವಲಯಗಳ ಆಯುಕ್ತರೊಂದಿಗೆ ಸಭೆ ನಡೆಸಿ, ನಿರಂತರ ಸಂಪರ್ಕದಲ್ಲಿರಬೇಕು.
* ಹಣದ ಕೊರತೆಯಿದ್ದರೆ ಆರ್ಥಿಕ ಇಲಾಖೆಯಿಂದ ಬಿಡುಗಡೆಗೊಳಿಸಲು ಕ್ರಮ ಕೈಗೊಳ್ಳುತ್ತೇವೆ.
* ಒಂದು ತಿಂಗಳ ನಂತರ ಮತ್ತೆ ಮೌಲ್ಯ ಮಾಪನ ನಡೆಸಲಾಗುವುದು
* ಗ್ರೇಟರ್ ಬೆಂಗಳೂರು ಪ್ರಾಧಿಕಾರದ ರಸ್ತೆ ಜಾಲದಲ್ಲಿ
1648.43 ಕಿ. ಮೀ ಉದ್ದದ ಆರ್ಟೀರಿಯಲ್ ಮತ್ತು ಸಬ್ ಆರ್ಟೀರಿಯಲ್ ರಸ್ತೆಗಳಿವೆ. 46.61ಕಿ.ಮೀ ಹೈಡೆನ್ಸಿಟಿ ಕಾರಿಡಾರ್ ರಸ್ತೆಗಳಿವೆ.
* ಬೆಂಗಳೂರು ಕೇಂದ್ರ, ಬೆಂಗಳೂರು ಪೂರ್ವ, ಪಶ್ಚಿಮ ಉತ್ತರ ಮತ್ತು ದಕ್ಷಿಣ ನಗರ ಪಾಲಿಕೆ ಗಳಲ್ಲಿ ಒಟ್ಟು 14,795 ರಸ್ತೆ ಗುಂಡಿಗಳನ್ನು ಗುರುತಿಸಿಲಾಗಿದೆ. ಈಗಾಗಲೇ 6,749 ಗುಂಡಿಗಳನ್ನು ಮುಚ್ಚಲಾಗಿದ್ದು, 8,046 ಗುಂಡಿಗಳು ಮುಚ್ಚಲು ಬಾಕಿ ಇವೆ.
* ಈಗಾಗಲೇ 108.20 ಕಿ.ಮೀ ಉದ್ದದ ರಸ್ತೆಗಳಲ್ಲಿ ವೈಟ್ ಟಾಪಿಂಗ್ ಕಾಮಗಾರಿ ಪೂರ್ಣಗೊಂಡಿದೆ.143.68 ಕಿ.ಮೀ ಉದ್ದದ ರಸ್ತೆ ಯಲ್ಲಿ ವೈಟ್ ಟಾಪಿಂಗ್ ಕಾಮಗಾರಿ ಪ್ರಗತಿಯಲ್ಲಿದೆ. ಒಟ್ಟಾರೆ 584.60 ಕಿ ಮೀ ಉದ್ದದ ರಸ್ತೆಗಳಲ್ಲಿ ಅಭಿವೃದ್ಧಿ ಕಾಮಗಾರಿಗಳು ನಡೆಯುತ್ತಿವೆ.
* ಆರ್ಟೀರಿಯಲ್ ಮತ್ತು ಸಬ್ ಆರ್ಟೀರಿಯಲ್ ರಸ್ತೆ ಗಳಲ್ಲಿ ಗುಂಡಿಗಳನ್ನು ಮುಚ್ಚಲು 2025-26 ರ ಆಯವ್ಯಯದಲ್ಲಿ 18 ಕೋಟಿ ರೂಪಾಯಿಗಳ ಅನುದಾನ ಒದಗಿಸಲಾಗಿದೆ.
* ಎಲ್ಲಾ ನಗರ ಪಾಲಿಕೆಗಳಿಗೂ ತುರ್ತು ಕಾಮಗಾರಿಗಳನ್ನು ಕೈಗೊಳ್ಳಲು ರೂ. 25 ಕೋಟಿಗಳ ಹಣವನ್ನು ಬಿಡುಗಡೆ ಮಾಡಲಾಗಿದ್ದು, ಪಾಲಿಕೆಗಳಿಂದ ರಸ್ತೆ ಗುಂಡಿಗಳನ್ನು ಮುಚ್ಚಲು ಕ್ರಮ ವಹಿಸಲಾಗಿದೆ.
* ನೂತನ ತಂತ್ರಜ್ಞಾನ JETPATCHER ಬಳಸಿಕೊಳ್ಳಲು ರೂ. 2.50 ಕೋಟಿಗಳ ಮೊತ್ತದ ಟೆಂಡರ್ ಚಾಲ್ತಿಯಲ್ಲಿದ್ದು ಸದರಿ ತಂತ್ರಜ್ಞಾನದಿಂದ ತೇವಾಂಶವಿರುವ ಸಮಯದಲ್ಲಿಯೂ ಗುಂಡಿಗಳನ್ನು ಮುಚ್ಚಬಹುದಾಗಿದೆ.
* ಐದೂ ಪಾಲಿಕೆಗಳೊಂದಿಗೆ ಸಮನ್ವಯ ಸಾಧಿಸಲು ಒಬ್ಬ ತಾಂತ್ರಿಕ ಸಮನ್ವಯಾಧಿಕಾರಿ ನೇಮಿಸಲು ಕ್ರಮ ಕೈಗೊಳ್ಳಬೇಕು.
* ಇಬ್ಬಲೂರು ಜಂಕ್ಷನ್, ಅಗರ, ವೀರಣ್ಣನ ಪಾಳ್ಯ, ನಾಗವಾರ ಮತ್ತು ಹೆಬ್ಬಾಳ ಜಂಕ್ಷನ್ ಗಳಲ್ಲಿ ಜಲಮಂಡಳಿ ಮತ್ತು ಮೆಟ್ರೋ ಕಾಮಗಾರಿಯಿಂದ ಜಂಕ್ಷನ್ ಹಾಳಾಗಿದ್ದು ರೂ.400 ಕೋಟಿಗಳ ಹೊರವರ್ತುಲ ರಸ್ತೆ ಅಭಿವೃದ್ಧಿ ಯೋಜನೆಯಡಿ ಸಮಗ್ರವಾಗಿ ಅಭಿವೃದ್ದಿ ಪಡಿಸಲು ಉದ್ದೇಶಿಸಲಾಗಿದೆ.
* ಅಕ್ಟೋಬರ್ ಅಂತ್ಯ ವೇಳೆಗೆ ಎಲ್ಲಾ ಗುಂಡಿಗಳನ್ನು ಮುಚ್ಚಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದ್ದಾರೆ.
ಸಭೆಯಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್, ಸಚಿವ ಕೆ.ಜೆ. ಜಾರ್ಜ್, ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಸೇರಿದಂತೆ ಹಿರಿಯ ಅಧಿಕಾರಿಗಳು ಇದ್ದರು.